



ಡೈಲಿವಾರ್ತೆ: 05/ಮೇ/2026

ಚಲಿಸುತ್ತಿದ್ದ ಪಲ್ಲಕ್ಕಿ ಬಸ್ ಅಗ್ನಿಗಾಹುತಿ – ಚಾಲಕನ ಸಮಯಪ್ರಜ್ಞೆ 17 ಮಂದಿ ಪಾರು!

ಹಾವೇರಿ: ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿಯ ಪ್ರತಿಷ್ಠಿತ ‘ಪಲ್ಲಕ್ಕಿ’ ಬಸ್ ಆಕಸ್ಮಿಕ ಬೆಂಕಿಗೆ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ತಪ್ಪಿದ್ದು, ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಗದಗ ಕಡೆಗೆ ಹೊರಟಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ದೇವರಗುಡ್ಡ ಗ್ರಾಮದ ಸಮೀಪದ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ಸಿನ ಬ್ರೇಕ್ ಲೈನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ. ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಎಚ್ಚೆತ್ತುಕೊಂಡ ಚಾಲಕ ಪಕ್ಕೀರಪ್ಪ, ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಶೀಘ್ರವಾಗಿ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿಕೊಂಡಿದ್ದು, ಪ್ರಯಾಣಿಕರೆಲ್ಲರೂ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಹಾನಿ ತಪ್ಪಿದೆ. ಚಾಲಕ ಪಕ್ಕೀರಪ್ಪ ಅವರು ಬೆಂಕಿ ನಂದಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಬ್ರೇಕ್ ಲೈನ್ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ ಎಂಬ ಅನುಮಾನವಿದ್ದು, ಚಾಲಕನ ತುರ್ತು ನಿರ್ಧಾರದಿಂದ 17 ಜೀವಗಳು ಉಳಿದಿವೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಅಸ್ಥಿಪಂಜರದಂತಾಗಿದೆ.
ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.