ಡೈಲಿವಾರ್ತೆ: 07/ಮೇ/2026

ಅರಣ್ಯ ಇಲಾಖೆ ಸಿಬ್ಬಂದಿಗೆ ಜೀವ ಬೆದರಿಕೆ, ಹಾಗೂ 25 ಸಾವಿರಕ್ಕೆ ಬ್ಲ್ಯಾಕ್ಮೇಲ್ ಆರೋಪ – ದೂರು ದಾಖಲು

ಕುಂದಾಪುರ, ಮೇ 7: ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಸ್ತು ಅರಣ್ಯ ಪಾಲಕರೊಬ್ಬರಿಗೆ ಹಣದ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿರುವ ಗಂಭೀರ ಘಟನೆ ಕುಂದಾಪುರ ಸಂಗಂ ಜಂಕ್ಷನ್ ಸಮೀಪ ನಡೆದಿರುವುದು ಬೆಳಕಿಗೆ ಬಂದಿದೆ.

ಇಲಾಖಾ ಸಿಬ್ಬಂದಿಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ ಬೆದರಿಕೆ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ಸ್ಥಳೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬಸ್ರೂರಿನಿಂದ ಗಂಗೊಳ್ಳಿಗೆ ಪ್ರತಿದಿನ ಕರ್ತವ್ಯಕ್ಕೆ ತೆರಳುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ, ಮೇ 1ರಂದು ಕುಂದಾಪುರ ವಲಯ ಅರಣ್ಯಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಕಚೇರಿ ಗೇಟ್ ಬಳಿ ಸದಾಶಿವ ಕೋಟೆಕಾರ್ ಎಂಬಾತ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿದ್ದಾನೆ ಎನ್ನಲಾಗಿದೆ. ನೀನು ಇಲಾಖೆಯಲ್ಲಿ ದೊಡ್ಡ ಮಟ್ಟದ ವಹಿವಾಟು ಮಾಡುತ್ತಿದ್ದೀಯ. ನಿನ್ನ ಎಲ್ಲ ಮಾಹಿತಿ ನನ್ನ ಬಳಿ ಇದೆ. ₹25 ಸಾವಿರ ಹಣ ಕೊಡಬೇಕು. ಇಲ್ಲದಿದ್ದರೆ ನಿನ್ನ ವಿಚಾರಗಳನ್ನು ಬಹಿರಂಗ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಾದ ಬಳಿಕ ಮೇ 6ರಂದು ಮತ್ತೆ ಅದೇ ಸ್ಥಳದಲ್ಲಿ ಆರೋಪಿ ಎದುರಾಗಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಮತ್ತೊಮ್ಮೆ ಹಣದ ಬೇಡಿಕೆ ಇಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈಗಲೇ ₹25 ಸಾವಿರ ಕೊಡಬೇಕು. ಇಲ್ಲದಿದ್ದರೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆದು ನಿನ್ನ ವಿರುದ್ಧ ಬಹಿರಂಗ ಮಾಡುತ್ತೇನೆ. ಜೀವಕ್ಕೂ ಅಪಾಯ ಉಂಟು ಮಾಡುತ್ತೇನೆ ಎಂದು ನೇರ ಜೀವ ಬೆದರಿಕೆ ಹಾಕಿರುವುದಾಗಿ ಪೀಡಿತ ಸಿಬ್ಬಂದಿ ಆರೋಪಿಸಿದ್ದಾರೆ.ಘಟನೆ ವೇಳೆ ಅರಣ್ಯ ಸಿಬ್ಬಂದಿ ಜೋರಾಗಿ ಕೂಗಿದ ಪರಿಣಾಮ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಸದಾಶಿವ ಕೋಟೆಕಾರ್ ಈ ಹಿಂದೆ ಅರಣ್ಯ ಇಲಾಖೆಯಲ್ಲಿ ತಾತ್ಕಾಲಿಕ ಜೀಪ್ ಚಾಲಕರಾಗಿ ಕಾರ್ಯನಿರ್ವಹಿಸಿದ್ದನು. ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವುದು, ಹಣದ ಬೇಡಿಕೆ ಇಟ್ಟಿರುವುದು ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪಗಳು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿವೆ. ಈ ಸಂಬಂಧ ಪೀಡಿತ ಸಿಬ್ಬಂದಿ ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರಿ ಸಿಬ್ಬಂದಿಯ ಭದ್ರತೆ ಕುರಿತ ಆತಂಕ ಹೆಚ್ಚಿಸಿದೆ. ಇದೀಗ ಪೊಲೀಸ್ ಇಲಾಖೆ ಪ್ರಕರಣವನ್ನು ಯಾವ ರೀತಿಯಲ್ಲಿ ಕೈಗೆತ್ತಿಕೊಳ್ಳಲಿದೆ ಎಂಬುದರ ಮೇಲೆ ಸಾರ್ವಜನಿಕರ ಗಮನ ನೆಟ್ಟಿದೆ.