



ಡೈಲಿವಾರ್ತೆ: 15/ಮೇ/2026

ಬ್ರಹ್ಮಾವರ: ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರ ಭರತ್ ಜಯರಾಮ್ ದಾಸ ಜಿಲ್ಲೆಯಿಂದ ಗಡಿಪಾರು

ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕ್ರಮ ಮುಂದುವರಿಸಿದ್ದು ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದ ಆರೋಪಿಯೊಬ್ಬನನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ಭರತ್ ಜಯರಾಮ್ ದಾಸ (34) ಗಡಿಪಾರು ಶಿಕ್ಷೆಗೆ ಒಳಗಾದ ವ್ಯಕ್ತಿ.
ಪೊಲೀಸ್ ಅಧೀಕ್ಷಕರಿಂದ ಕಠಿಣ ಆದೇಶ: ಆರೋಪಿ ಭರತ್ ಜಯರಾಮ್ ದಾಸ ವಿರುದ್ಧ ಸಮಾಜ ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು ಮೇ 14, 2026 ರಂದು ಈ ಗಡಿಪಾರು ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಬಂಧಿತ ಆರೋಪಿಯ ಮೇಲೆ ಈ ಹಿಂದೆ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಒಟ್ಟು 3 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳು ದಾಖಲಾಗಿದ್ದವು.ದಾಖಲಾಗಿರುವ ಪ್ರಕರಣಗಳ ಪೈಕಿ ಈಗಾಗಲೇ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದೆ.ಉಳಿದ ಎರಡು ಪ್ರಕರಣಗಳು ಪ್ರಸ್ತುತ ತನಿಖಾ ಹಂತದಲ್ಲಿವೆ.ತನ್ನ ಚಾಳಿಯನ್ನು ಮುಂದುವರಿಸಿದ್ದ ಆರೋಪಿಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲೆಯಿಂದ ಹೊರಹಾಕಲು ತೀರ್ಮಾನಿಸಲಾಯಿತು.
ಬೆಂಗಳೂರಿನ ಕೆಂಗೇರಿಗೆ ಸ್ಥಳಾಂತರ: ಆದೇಶದ ಅನ್ವಯ ಭರತ್ ಜಯರಾಮ್ ದಾಸನನ್ನು ಉಡುಪಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದ್ದು, ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಗೆ ಕಳುಹಿಸಿಕೊಡಲಾಗಿದೆ. ಗಡಿಪಾರು ಅವಧಿಯಲ್ಲಿ ಜಿಲ್ಲೆಯೊಳಗೆ ಪ್ರವೇಶಿಸದಂತೆ ಆತನಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಇಂತಹ ದಂಧೆಗಳಲ್ಲಿ ತೊಡಗುವವರ ವಿರುದ್ಧ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.