



ಡೈಲಿವಾರ್ತೆ: 16/ಮೇ/2026

ಎಸ್‌ಡಿಟಿಯು ರಾಜ್ಯ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಮಂಗಳೂರಿನಲ್ಲಿ ಗೌರವ ಸಮಾರಂಭ

ಮಂಗಳೂರು: ಕಾರ್ಮಿಕರ ಹಕ್ಕುಗಳ ರಕ್ಷಣೆ ಹಾಗೂ ಸಂಘಟಿತ ಹೋರಾಟದ ಅಗತ್ಯತೆಯನ್ನು ಒತ್ತಿಹೇಳುತ್ತಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ರಾಜ್ಯ ಸಮಿತಿಗೆ ನೂತನವಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನಾ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳೂರಿನ ಜಿಲ್ಲಾ ಕಚೇರಿಯಲ್ಲಿ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಟಿಯು ಮಂಗಳೂರು ನಗರ ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಎಸ್‌ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ಸಮಾಜದ ಎಲ್ಲಾ ವರ್ಗದ ಕಾರ್ಮಿಕರನ್ನು ಸಂಘಟಿಸಿ ಅವರ ಹಕ್ಕುಗಳು ಹಾಗೂ ಶ್ರೇಯೋಭಿವೃದ್ಧಿಗಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ರಾಜ್ಯಾಧ್ಯಕ್ಷನಾಗಿ ನೀಡಲಾದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಎಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ., ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಖಾದರ್ ಪರಂಗಿಪೇಟೆ, ಅಬೂಬಕ್ಕರ್ ಮದ್ದ, ಅಬ್ದುಲ್ ಹಮೀದ್ ಸಾಲ್ಮರ ಹಾಗೂ ಹನೀಫ್ ಮೂಳೂರು ಉಪಸ್ಥಿತರಿದ್ದರು.
ಇದಲ್ಲದೆ ಎಸ್‌ಡಿಟಿಯು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಬೆಂಗ್ರೆ, ಮುಲ್ಕಿ ಘಟಕದ ಅಧ್ಯಕ್ಷ ವಿಶು ಕುಮಾರ್, ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷ ಇಕ್ಬಾಲ್ ಬಿ.ಪಿ. ಹಾಗೂ ಮಾಡಲ್ಸ್ ಮಂಗಳೂರು ಮಾಲಕರಾದ ಹಮೀದ್ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಎಸ್‌ಡಿಟಿಯು ರಾಜ್ಯ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಎಸ್‌ಡಿಟಿಯು ಮಂಗಳೂರು ನಗರ ತಾಲೂಕು ಸಮಿತಿ ಕಾರ್ಯದರ್ಶಿ ಅನ್ಸಾರ್ ಕುದ್ರೋಳಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.