



ಡೈಲಿವಾರ್ತೆ: 19/ಮೇ/2026

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರ ದಾರುಣ ಸಾವು

ಕೊಪ್ಪಳ, ಮೇ 19: ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಗಳವಾರ ಸಂಭವಿಸಿದೆ. ಈ ದುರ್ಘಟನೆಯಿಂದ ಗ್ರಾಮದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿದೆ.
ಮೃತ ಬಾಲಕಿಯರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ (15) ಹಾಗೂ ಮುತ್ತವ್ವ ಹರಣಸಿಕಾರಿ (8) ಎಂದು ಗುರುತಿಸಲಾಗಿದೆ.
ಯರೇಹಂಚಿನಾಳ ಗ್ರಾಮದಿಂದ ಗದಗಕ್ಕೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿರುವ 362ನೇ ಸರ್ವೆ ನಂಬರಿನ ಕೃಷಿ ಹೊಂಡದ ಬಳಿ ಬಾಲಕಿಯರು ಬಟ್ಟೆ ತೊಳೆಯಲು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದ ಪರಿಣಾಮ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಬಾಲಕಿಯರ ಮೃತದೇಹಗಳನ್ನು ಹೊರತೆಗೆದ ವೇಳೆ ಮನಕಲಕುವ ದೃಶ್ಯಗಳು ಕಂಡುಬಂದವು. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಗ್ರಾಮಸ್ಥರ ಕಣ್ಣೀರಿಗೂ ಕಾರಣವಾಯಿತು.
ಮೃತ ಬಾಲಕಿಯರ ಕುಟುಂಬಗಳು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆ, ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು ಎಂದು ಸ್ಥಳೀಯರು ಮತ್ತು ಸಂಬಂಧಿಕರು ಆಗ್ರಹಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಕುಕನೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.