ಡೈಲಿವಾರ್ತೆ: 22/ಮೇ/2026

ಉಡುಪಿ:ಬಾವಿ ತೋಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವು – ಇನ್ನೋರ್ವ ಮಣ್ಣಿನಡಿ ಸಿಲುಕಿರುವ ಶಂಕೆ

ಉಡುಪಿ: ಜಿಲ್ಲೆಯ ಕೊಡವೂರು ಸಮೀಪದ ಗರಡಿಮಜಲು ಪ್ರದೇಶದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ದಾರುಣ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಾವಿ ತೋಡುವ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕನ ಮೃತದೇಹವನ್ನು ಬಹಳ ಕಷ್ಟಪಟ್ಟು ಹೊರತೆಗೆದಿದ್ದಾರೆ. ಮೃತರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ತಿಳಿದುಬಂದಿದೆ.

ಇನ್ನೂ ಒಬ್ಬ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಸಾಧ್ಯತೆ ಇದ್ದು, ಆತನ ಶೋಧ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಸ್ಥಳದಲ್ಲಿ ಜೆಸಿಬಿ ಯಂತ್ರಗಳ ಸಹಾಯದಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು, ರಕ್ಷಣಾ ಸಿಬ್ಬಂದಿ ಅತ್ಯಂತ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.ಘಟನೆಯ ಬಳಿಕ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಕಾರ್ಮಿಕರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಅವಘಡಕ್ಕೆ ಬಾವಿ ತೋಡುವ ವೇಳೆ ಸುರಕ್ಷತಾ ಕ್ರಮಗಳ ಕೊರತೆಯೇ ಕಾರಣವೋ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.