




ಡೈಲಿವಾರ್ತೆ: 27/ಮೇ/2026


ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಕೋಡಿಕಲ್ ಬಳಿ ಮಧ್ಯರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಭೀಕರ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಸಚಿನ್ ಕೆ.ಆರ್. (24 ವರ್ಷ) ಮತ್ತು ನೆಲ್ಯಾಡಿ ನಿವಾಸಿ ಚಂದನ್ (24 ವರ್ಷ) ಎಂದು ಗುರುತಿಸಲಾಗಿದೆ.
ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಘಟನೆಯ ಹಿನ್ನೆಲೆ:
ಮೇ 24 ರಂದು ಮಧ್ಯರಾತ್ರಿ ಸುಮಾರು 02:10 ಗಂಟೆಯ ವೇಳೆಗೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನದ ರಸ್ತೆ ಎದುರು ಪೊಲೀಸ್ ಸಿಬ್ಬಂದಿ ಬೀಟ್ ಕರ್ತವ್ಯದಲ್ಲಿದ್ದರು. ಈ ಸಂದರ್ಭದಲ್ಲಿ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂದ ಆರೋಪಿಗಳನ್ನು ಪೊಲೀಸರು ತಡೆದು ತಡರಾತ್ರಿ ಓಡಾಟ ನಡೆಸುತ್ತಿರುವ ಕುರಿತು ಪ್ರಶ್ನಿಸಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಸ್ಕೂಟರ್‌ನ ಹಿಂಬದಿಯಲ್ಲಿ ಕುಳಿತಿದ್ದ ಆರೋಪಿ, ಏಕಾಏಕಿ ಅಲ್ಲೇ ಬಿದ್ದಿದ್ದ ಸಿಮೆಂಟ್ ಶೀಟ್ ತುಂಡಿನಿಂದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯ ತಲೆಗೆ ಬಲವಾಗಿ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದನು. ಹಲ್ಲೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಂಗಳೂರು ಸಿಸಿಬಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ತನಿಖೆ ಆರಂಭಿಸಿದ್ದರು. ಆರೋಪಿಗಳು ಕೃತ್ಯದ ಬಳಿಕ ನೆರೆರಾಜ್ಯ ಕೇರಳಕ್ಕೆ ಪಲಾಯನಗೈದಿರುವ ಖಚಿತ ಮಾಹಿತಿ ಬೆನ್ನತ್ತಿದ ಸಿಸಿಬಿ ತಂಡ, ಮೇ 26ರಂದು ಕೇರಳದ ಕಾಂಞಂಗಾಡ್ ಪ್ರದೇಶದಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಸದ್ಯ ಬಂಧಿತರನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ವಿಚಾರಣೆಯಲ್ಲಿ ಬಯಲಾದ ಸತ್ಯ:
ಪೊಲೀಸರ ಪ್ರಾಥಮಿಕ ವಿಚಾರಣೆಯ ವೇಳೆ, ಬಂಧಿತ ಆರೋಪಿಗಳು ಮಂಗಳೂರು ನಗರದಲ್ಲೇ ಉದ್ಯೋಗದಲ್ಲಿದ್ದು, ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು ಎಂಬುದು ತಿಳಿದುಬಂದಿದೆ. ಮಧ್ಯರಾತ್ರಿ ಅನಗತ್ಯವಾಗಿ ಸುತ್ತಾಡುತ್ತಿದ್ದಾಗ ಪೊಲೀಸರು ತಡೆದು ವಿಚಾರಣೆ ನಡೆಸಿದ್ದಕ್ಕೇ ಕೋಪಗೊಂಡು ಈ ದುಷ್ಕೃತ್ಯ ಎಸಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ರಕ್ಷಕರ ಮೇಲೆಯೇ ನಡೆದಿರುವ ಈ ಹಲ್ಲೆ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತಾದರೂ, ಕೇವಲ 48 ಗಂಟೆಗಳ ಒಳಗೆ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.