




ಡೈಲಿವಾರ್ತೆ: 30/ಮೇ/2026


ಕೇಂದ್ರದ ಜನವಿರೋಧಿ ನೀತಿಗಳ ವಿರುದ್ಧ ಉಡುಪಿಯಲ್ಲಿ ಕಾಂಗ್ರೆಸ್ ಗರ್ಜನೆ: SIR, NEET ಹಗರಣ ಹಾಗೂ ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಉಡುಪಿ, ಮೇ 30: ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಉಡುಪಿಯಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು.
ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಮೆರವಣಿಗೆಯು ಕಾಂಗ್ರೆಸ್ ಭವನದಿಂದ ಹೊರಟು ಬ್ರಹ್ಮಗಿರಿ ಸರ್ಕಲ್ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ಸಾಗಿತು. ಮೆರವಣಿಗೆಯ ವೇಳೆ ಕಾರ್ಯಕರ್ತರು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ SIR ಪ್ರಕ್ರಿಯೆ, NEET ಪರೀಕ್ಷಾ ಹಗರಣ ಹಾಗೂ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಗಳಿಂದ ಸಾಮಾನ್ಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ವಿದ್ಯಾರ್ಥಿಗಳು, ರೈತರು ಹಾಗೂ ಮಧ್ಯಮ ವರ್ಗದ ಜನರ ಹಿತಾಸಕ್ತಿಗಳಿಗೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿದರು. NEET ಪರೀಕ್ಷಾ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಒಳಗಾಗಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಮಂಜುನಾಥ ಪೂಜಾರಿ ಹೆಬ್ರಿ, ಸತೀಶ್ ಕೊಡವೂರು, ಹರಿಪ್ರಸಾದ್ ರೈ, ಪ್ರಸಾದ್ ಕಾಂಚನ್, ರಮೇಶ್ ಕಾಚನ್, ಹರೀಶ್ ಕಿಣಿ, ಕಿಶನ್ ಹೆಗ್ಡೆ, ಸೌರಭ್ ಬಲ್ಲಾಳ್, ಪ್ರಖ್ಯಾತ್ ಶೆಟ್ಟಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಜ್ಯೋತಿ ಹೆಬ್ಬಾರ್ ಸೇರಿದಂತೆ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಕೇಂದ್ರ ಸರ್ಕಾರ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದು, ಜನವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದರು.