



ಡೈಲಿವಾರ್ತೆ: 30/ಮೇ/2026


ಅಂಕೋಲಾ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 20 ಮಂದಿಗೆ ಗಾಯ

ಅಂಕೋಲಾ, ಮೇ 30: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟ ಪ್ರಯಾಣಿಕ ಆಂಧ್ರಪ್ರದೇಶ ಮೂಲದ ಶರಣ್ಯ (42) ಎಂದು ಗುರುತಿಸಲಾಗಿದೆ. ಗಾಯಾಳುಗಳ ಪೈಕಿ 9 ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ: ಸೀಬರ್ಡ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಐಷಾರಾಮಿ ಬಸ್ 36 ಪ್ರಯಾಣಿಕರೊಂದಿಗೆ ಬಳ್ಳಾರಿಯಿಂದ ಗೋವಾ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಅಂಕೋಲಾ ಸಮೀಪದ ಕಾಂಚನಬಾಗಲ್ (ಉದಲೂರು) ಬಳಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಮಧ್ಯದಲ್ಲೇ ಪಲ್ಟಿಯಾಗಿದೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ಅತಿವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪರಿಣಾಮವಾಗಿ ಹಲವಾರು ಪ್ರಯಾಣಿಕರಿಗೆ ತಲೆ, ಎದೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ.ಅಪಘಾತದ ತೀವ್ರತೆಯಿಂದ ಬಸ್ ಸಂಪೂರ್ಣವಾಗಿ ಹೆದ್ದಾರಿಯ ಮಧ್ಯದಲ್ಲಿ ಉರುಳಿಬಿದ್ದಿದ್ದು, ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಿಲುಕಿಕೊಂಡು ಹಲವು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಯಿತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಂಕೋಲಾ ಪೊಲೀಸರು, ರಕ್ಷಣಾ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಕಿಟಕಿಗಳನ್ನು ಒಡೆದು ಹೊರತೆಗೆದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಗಾಯಾಳುಗಳನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರವಾಗಿ ಗಾಯಗೊಂಡಿರುವ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕೆಆರ್‌ಐಎಂಎಸ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದ ಗಾಯಾಳುಗಳ ಚಿಕಿತ್ಸೆ ಅಂಕೋಲಾ ಆಸ್ಪತ್ರೆಯಲ್ಲೇ ಮುಂದುವರಿದಿದೆ. ನಂತರ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕ್ರೇನ್ ಸಹಾಯದಿಂದ ಪಲ್ಟಿಯಾಗಿದ್ದ ಬಸ್ಸನ್ನು ತೆರವುಗೊಳಿಸಿ ಸಂಚಾರವನ್ನು ಪುನಃಸ್ಥಾಪಿಸಿದರು. ಹಲವು ಗಂಟೆಗಳ ಕಾಲ ಸ್ಥಗಿತಗೊಂಡಿದ್ದ ವಾಹನ ಸಂಚಾರ ಬಳಿಕ ಸಹಜ ಸ್ಥಿತಿಗೆ ಮರಳಿತು.
ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.