



ಡೈಲಿವಾರ್ತೆ: 03/ಜೂ./2026


ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ: ಹೋರಾಟದ ಹಾದಿಯಿಂದ ರಾಜ್ಯದ ನಾಯಕತ್ವದ ಶಿಖರಕ್ಕೆ

ಬೆಂಗಳೂರು, ಜೂನ್ 3: ದೀರ್ಘಕಾಲದ ರಾಜಕೀಯ ಹೋರಾಟ, ಸಂಘಟನಾ ಸಾಮರ್ಥ್ಯ ಮತ್ತು ಪಕ್ಷನಿಷ್ಠೆಯ ಮೂಲಕ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡು, ತಮ್ಮ ಆರಾಧ್ಯ ದೈವ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಕಾರ್ಯಕ್ರಮದ ಆರಂಭಕ್ಕೂ ಮುನ್ನ ವೇದಿಕೆಯಲ್ಲಿ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದ ಅವರು, ಬಳಿಕ ವೀರ ಗಂಗಾಧರ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಕ್ಷಣಗಳು ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ಗಮನ ಸೆಳೆದವು.
ರಾಜಕೀಯ ಜೀವನದ ಹಲವು ಏಳುಬೀಳುಗಳನ್ನು ಎದುರಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ನಾಯಕನಾಗಿ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರ ಅಧಿಕಾರಾರೋಹಣ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಬೆಂಬಲಿಗರು ಮತ್ತು ಗಣ್ಯರ ಸಮ್ಮುಖದಲ್ಲಿ ನಡೆದ ಸಮಾರಂಭವು ಐತಿಹಾಸಿಕ ಮಹತ್ವ ಪಡೆದುಕೊಂಡಿತು.
ಇದೇ ವೇಳೆ, ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರದ ಹಿನ್ನೆಲೆಯಲ್ಲಿ ಅಪರೂಪದ ಹಾಗೂ ಶಕ್ತಿಶಾಲಿ ಎಂದು ಪರಿಗಣಿಸಲ್ಪಡುವ ‘ಮಾಲವ್ಯ ಯೋಗ’ದ ಮುಹೂರ್ತದಲ್ಲಿ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಲಾಗಿತ್ತು. ತುಲಾ ಲಗ್ನದಲ್ಲಿ ನಡೆದ ಈ ಪ್ರತಿಜ್ಞಾವಿಧಿಯು ಆಡಳಿತಕ್ಕೆ ಶುಭಸೂಚಕ ಎನ್ನುವ ಅಭಿಪ್ರಾಯವನ್ನು ಜ್ಯೋತಿಷ್ಯ ವಲಯಗಳು ವ್ಯಕ್ತಪಡಿಸಿವೆ.
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರ ಮುಂದಿರುವ ಆಡಳಿತಾತ್ಮಕ ಹಾಗೂ ರಾಜಕೀಯ ಸವಾಲುಗಳ ನಡುವೆಯೂ ರಾಜ್ಯದ ಅಭಿವೃದ್ಧಿ, ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಸುಶಾಸನಕ್ಕೆ ಆದ್ಯತೆ ನೀಡುವ ನಿರೀಕ್ಷೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯಕ್ಕೆ ಬುಧವಾರ ಚಾಲನೆ ದೊರೆತಿದ್ದು, ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮುಂದಿನ ಹೆಜ್ಜೆಗಳತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ.