ಡೈಲಿವಾರ್ತೆ: 05/ಜೂ./2026

ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ವಿಶ್ವಪರಿಸರ ದಿನಾಚರಣೆ:
ಪ್ರಕೃತಿ ಸಂರಕ್ಷಣೆ ಮನುಕುಲದ ಮಹತ್ತರ ಜವಾಬ್ದಾರಿ, ಹಸಿರು ಭವಿಷ್ಯ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು – ಅನುಪಮಾ ಎಸ್. ಶೆಟ್ಟಿ

ವಕ್ವಾಡಿ, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶುಕ್ರವಾರ ಅರ್ಥಪೂರ್ಣ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್‌ನ ಜಂಟಿ ಕಾರ್ಯನಿರ್ವಾಹಕರಾದ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ವಹಿಸಿದ್ದರು.
ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದ ಅವರು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಮಾತನಾಡಿ ಪ್ರಕೃತಿ ಇದ್ದರೆ ಮಾತ್ರ ನಾವು ಮತ್ತು ನಮ್ಮ ಬದುಕು ಎಂಬ ಸತ್ಯವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ‘ಪ್ರಕೃತಿಯನ್ನು ಪೋಷಿಸೋಣ, ಹಸಿರು ಭವಿಷ್ಯವನ್ನು ನಿರ್ಮಿಸೋಣ’ ಎಂಬ ಸಂದೇಶವು ನಮ್ಮ ಜೀವನದ ಮೂಲಮಂತ್ರವಾಗಬೇಕು ಎಂದು ಹೇಳಿದರು.

ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ಅಭಿಪ್ರಾಯಪಟ್ಟ ಅವರು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಯುವ ಮನಸ್ಸುಗಳು ಗಿಡಮರಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಪರಿಸರದ ಉಳಿವಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶಾಲೆಯ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿಯ ಸಂದೇಶ ನೀಡಿ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಕೈಗೊಂಡರು.

ಸಹಶಿಕ್ಷಕಿ ಶ್ರೀಮತಿ ಐಶ್ವರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.