ಡೈಲಿವಾರ್ತೆ: 06/ಜೂ./2026

ವಾರಂಟ್ ಆರೋಪಿಗಳ ಬೆನ್ನತ್ತಿದ ಕದ್ರಿ ಪೊಲೀಸರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು, ಜೂನ್ 6: ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಹಾಗೂ ಜಾಮೀನು ರಹಿತ ವಾರಂಟ್ ಎದುರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಬಂಧಿತರನ್ನು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಕೋಟೆ ಬಡಾವಣೆಯ ನಿವಾಸಿ ಶ್ರೀನಿವಾಸ ಸಿರಯಾನ್ (56) ಹಾಗೂ ಅರಕಲಗೂಡು ತಾಲೂಕಿನ ದೊಡ್ಡಗಾವನಹಳ್ಳಿ ಗ್ರಾಮದ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ (28) ಎಂದು ಗುರುತಿಸಲಾಗಿದೆ.

ಶ್ರೀನಿವಾಸ ಸಿರಯಾನ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಿ.ಸಿ. ನಂ. 20.1108/2025 ಪ್ರಕರಣದ ವಿಚಾರಣೆ ನಡೆಯುತ್ತಿತ್ತು. ಆದರೆ ನ್ಯಾಯಾಲಯದ ಮುಂದೆ ಹಾಜರಾಗದೆ ಇರುವುದರಿಂದ ಆತನ ವಿರುದ್ಧ ಹಲವು ಬಾರಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿತ್ತು.

ಇನ್ನೋರ್ವ ಆರೋಪಿ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ ವಿರುದ್ಧ 2019ರಲ್ಲಿ ಕದ್ರಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಸಿ. ನಂ. 815/2021 ಅಡಿಯಲ್ಲಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ನಿರಂತರವಾಗಿ ಗೈರಾಗಿದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧವೂ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಪತ್ತೆಗಾಗಿ ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಜೂನ್ 6ರಂದು ಇಬ್ಬರನ್ನೂ ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.