



ಡೈಲಿವಾರ್ತೆ: 07/ಜೂ./2026


ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ: ಜನರಿಗೆ ‘ಸ್ಲೋ ಪಾಯ್ಸನ್’ ನೀಡುತ್ತಿರುವ ಕೇಂದ್ರ ಸರ್ಕಾರ – ರಮೇಶ್ ಕಾಂಚನ್

ಉಡುಪಿ, ಜೂ.7: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನತೆಗೆ “ಸ್ಲೋ ಪಾಯ್ಸನ್” ನೀಡುತ್ತಿರುವಂತೆಯೇ ವರ್ತಿಸುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಧಿಕಾರಕ್ಕೆ ಬರುವ ಮುನ್ನ ದೇಶದ ಜನತೆಗೆ “ಅಚ್ಚೇ ದಿನ್” ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಅಧಿಕಾರಕ್ಕೆ ಬಂದ ಬಳಿಕ ನಿರಂತರ ಬೆಲೆ ಏರಿಕೆಯ ಮೂಲಕ ಜನರ ಬದುಕನ್ನು ದುಸ್ತರಗೊಳಿಸಿದೆ ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಸಾಮಾನ್ಯ ಜನರ ಹಿತಾಸಕ್ತಿಗಿಂತಲೂ ಕಾರ್ಪೊರೇಟ್ ವಲಯದ ಹಿತಾಸಕ್ತಿಗಳನ್ನು ಕಾಪಾಡುವತ್ತ ಹೆಚ್ಚು ಗಮನ ಹರಿಸುತ್ತಿವೆ. ಇದರ ಪರಿಣಾಮವಾಗಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುವಂತಾಗಿದೆ ಎಂದು ಅವರು ಹೇಳಿದ್ದಾರೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ, ವಿವಿಧ ಕಾರಣಗಳನ್ನು ಮುಂದಿಟ್ಟು ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ದರಗಳನ್ನು ಹೆಚ್ಚಿಸಲಾಗುತ್ತಿದೆ. ಇದು ಜನರ ಮೇಲಿನ ಆರ್ಥಿಕ ಹೊರೆ ಹೆಚ್ಚಿಸುವುದರ ಜೊತೆಗೆ ಜೀವನ ನಿರ್ವಹಣೆಯ ವೆಚ್ಚವನ್ನು ಮತ್ತಷ್ಟು ದುಬಾರಿಗೊಳಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರ ದಿನದಿಂದ ದಿನಕ್ಕೆ ಸಣ್ಣ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡುವ ಮೂಲಕ ಜನರ ಗಮನಕ್ಕೆ ಬಾರದ ರೀತಿಯಲ್ಲಿ ಆರ್ಥಿಕ ಒತ್ತಡವನ್ನು ಹೆಚ್ಚಿಸುತ್ತಿದೆ. ಈ ನೀತಿಯು ಸಾಮಾನ್ಯ ಕುಟುಂಬಗಳ ಜೀವನಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಜನರಲ್ಲಿ ವ್ಯಾಪಕ ಅಸಮಾಧಾನ ಮೂಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಈ ಕ್ರಮಗಳ ವಿರುದ್ಧ ಜನಾಕ್ರೋಶ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮುಂಬರುವ ದಿನಗಳಲ್ಲಿ ಜನರು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ರಮೇಶ್ ಕಾಂಚನ್ ಎಚ್ಚರಿಕೆ ನೀಡಿದ್ದಾರೆ.