



ಡೈಲಿವಾರ್ತೆ: 07/ಜೂ./2026


ಜನರ ಬದುಕಿನ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯ: ಬೆಲೆ ಏರಿಕೆ ಮೂಲಕ ಜನರ ಮೇಲೆ ಹೊರೆ – ಯತೀಂದ್ರ ಸಿದ್ದರಾಮಯ್ಯ ಕಿಡಿ

ವಿಜಯಪುರ, ಜೂನ್ 7: ಕೇಂದ್ರ ಸರ್ಕಾರವು ಜನರ ಬದುಕಿನ ಬಗ್ಗೆ ಯಾವುದೇ ಕಾಳಜಿ ವಹಿಸದೆ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದ್ದು, ಇದರಿಂದ ಸಾಮಾನ್ಯ ಜನರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾಸ್ ದರ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವಾಗಲೂ ಜನವಿರೋಧಿ ನೀತಿಗಳನ್ನೇ ಅನುಸರಿಸಿಕೊಂಡು ಬಂದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಗಣನೀಯವಾಗಿ ಇಳಿಕೆಯಾಗಿದ್ದ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಡಿಮೆ ಮಾಡುವ ಮೂಲಕ ಜನರಿಗೆ ಪರಿಹಾರ ನೀಡಲಿಲ್ಲ ಎಂದು ಆರೋಪಿಸಿದರು.
ಕಚ್ಚಾತೈಲದ ಬೆಲೆ ಕಡಿಮೆಯಾಗಿದ್ದಾಗಲೂ ಇಂಧನ ದರವನ್ನು ಹೆಚ್ಚಿಸಲಾಗಿತ್ತು. ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲದ ಬೆಲೆ ಏರಿಕೆಯಾಗಿರುವ ನೆಪದಲ್ಲಿ ಮತ್ತೊಮ್ಮೆ ದರ ಹೆಚ್ಚಳ ಮಾಡಲಾಗುತ್ತಿದೆ. ಹಿಂದಿನ ಅವಧಿಯಲ್ಲಿ ದರ ಇಳಿಕೆ ಮಾಡಿದ್ದರೆ ಈಗಿನ ಹೊರೆ ಜನರ ಮೇಲೆ ಬೀಳುತ್ತಿರಲಿಲ್ಲ ಎಂದು ಅವರು ಹೇಳಿದರು.
ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಜೀವನ ನಿರ್ವಹಣೆ ಕಷ್ಟಕರವಾಗುವುದಲ್ಲದೆ, ದೇಶದ ಆರ್ಥಿಕ ವ್ಯವಸ್ಥೆಯ ಮೇಲೆಯೂ ಪ್ರತಿಕೂಲ ಪರಿಣಾಮ ಉಂಟಾಗಲಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಎಚ್ಚರಿಸಿದರು.
ಇದೇ ವೇಳೆ ಕಾಕ್ರೋಚ್ ಜನತಾ ಪಕ್ಷ ದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ನಡೆಸುವ ಹಕ್ಕು ಮತ್ತು ಸ್ವಾತಂತ್ರ್ಯವಿದೆ. ಅವರು ಒಳ್ಳೆಯ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದರೆ ಅದನ್ನು ಸ್ವಾಗತಿಸಬೇಕು ಎಂದು ಹೇಳಿದರು.