



ಡೈಲಿವಾರ್ತೆ: 08/ಜೂ./2026


ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ದಿ. ದೇವರಾಜ ಅರಸು ಮೊಮ್ಮಗ, ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ
ಹೃದಯಾಘಾತದಿಂದ ನಿಧನ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಭಾನುವಾರ ರಾತ್ರಿ ಬೆಂಗಳೂರುನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸೂರಜ್ ಹೆಗ್ಡೆ ಅವರು ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೊಳಗಾಗಿ ತಕ್ಷಣ ಅವರನ್ನು ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಸೂರಜ್ ಹೆಗ್ಡೆ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮೃತರು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದು, ಪಕ್ಷದ ಸಂಘಟನೆಯಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜಕೀಯ ಜೀವನ ಆರಂಭಿಸಿದ್ದ ಸೂರಜ್ ಹೆಗ್ಡೆ , ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಸದ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದರು.
ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಗಣ್ಯರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.