


ಡೈಲಿವಾರ್ತೆ: 19/ಜೂ./2026


ಉಡುಪಿ: ಹೋಂ ಸ್ಟೇ ಮೇಲೆ ಮಲ್ಪೆ ಪೊಲೀಸರ ದಾಳಿ – ಎಂಡಿಎಂಎ, ಗಾಂಜಾ ವಶ; 7 ಮಂದಿ ಬಂಧನ

ಉಡುಪಿ, ಜೂ.19: ಕರಾವಳಿ ಭಾಗದಲ್ಲಿ ವ್ಯಾಪಕವಾಗುತ್ತಿರುವ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ವಿರುದ್ಧ ಮಲ್ಪೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹೋಂ ಸ್ಟೇ ಒಂದರ ಮೇಲೆ ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿರುವ ಘಟನೆ ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಂ ಸ್ಟೇಯಲ್ಲಿ ನಡೆದಿದೆ.
ಮಾದಕ ವಸ್ತುಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ., ಪಿಎಸ್‌ಐ ಗಂಗಪ್ಪ ಎಸ್. ಮತ್ತು ಸಿಬ್ಬಂದಿಗಳ ವಿಶೇಷ ತಂಡ ದಾಳಿ ನಡೆಸಿತು.
ದಾಳಿಯ ವೇಳೆ ಹೋಂ ಸ್ಟೇಯ ಒಂದು ಕೊಠಡಿಯಲ್ಲಿ ಇದ್ದ ನಾಜೀಲ್, ಮೊಹಮ್ಮದ್ ಅಜರುದ್ದೀನ್, ಮೊಹಮ್ಮದ್ ಅಫ್ನಾನ್ ಹಾಗೂ ವಿಘ್ನೇಶ್ ಎಂಬ ನಾಲ್ವರನ್ನು ಪರಿಶೀಲಿಸಿದಾಗ ಅವರು ಮಾದಕ ವಸ್ತು ಸೇವಿಸಿರುವುದು ಬೆಳಕಿಗೆ ಬಂದಿದೆ. ಬಳಿಕ ಪಂಚರ ಸಮ್ಮುಖದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 33.81 ಗ್ರಾಂ ಗಾಂಜಾ, 9.73 ಗ್ರಾಂ ಎಂಡಿಎಂಎ, ಐದು ಮೊಬೈಲ್ ಫೋನ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಅಂದಾಜು ಮೌಲ್ಯ ₹23 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಪ್ರವಾಸೋದ್ಯಮ ಇಲಾಖೆ ಹಾಗೂ ಮಲ್ಪೆ ಠಾಣಾಧಿಕಾರಿಗಳಿಂದ ಅನಧಿಕೃತವಾಗಿ ಹೋಂ ಸ್ಟೇ ನಡೆಸದಂತೆ ಈ ಹಿಂದೆ ನೋಟಿಸ್ ನೀಡಲಾಗಿದ್ದರೂ ನಿಯಮಗಳನ್ನು ಉಲ್ಲಂಘಿಸಿ ಹೋಂ ಸ್ಟೇ ನಡೆಸಲಾಗುತ್ತಿತ್ತು ಎಂಬುದು ಬಹಿರಂಗವಾಗಿದೆ. ಅಲ್ಲದೆ, ಹೋಂ ಸ್ಟೇಯನ್ನು ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಬಳಸಲು ಅವಕಾಶ ಕಲ್ಪಿಸಿರುವ ಆರೋಪದಡಿ ಮಾಲೀಕ ಧನ್ವತ್ ರಿಕಿತ್ ಹಾಗೂ ಸಿಬ್ಬಂದಿ ಬಸವರಾಜ್ ಅವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಜಂಲಿ ಜಿನಾ ಎಂಬವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳನ್ನು ನಾಜೀಲ್ (31), ಮೊಹಮ್ಮದ್ ಅಜರುದ್ದೀನ್ (42), ಮೊಹಮ್ಮದ್ ಅಫ್ನಾನ್ (19), ವಿಘ್ನೇಶ್ (35), ಬಸವರಾಜು (36), ಧನ್ವತ್ ರಿಕಿತ್ (36) ಹಾಗೂ ಗೀತಾಜಂಲಿ ಜಿನಾ (44) ಎಂದು ಗುರುತಿಸಲಾಗಿದೆ.
ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 67/2026 ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(a), 20(b)(ii)(a) ಹಾಗೂ 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಮಾದಕ ವಸ್ತುಗಳ ಜಾಲದ ಹಿಂದಿರುವ ಇತರ ವ್ಯಕ್ತಿಗಳ ಸಂಪರ್ಕ ಹಾಗೂ ಚಟುವಟಿಕೆಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.