ಡೈಲಿವಾರ್ತೆ: 22/ಜೂ./2026

ಅಡ್ಡಮತದಾನದ ಆರೋಪದ ಬೆನ್ನಲ್ಲೇ ಬಿಜೆಪಿ ಕಠಿಣ ನಡೆ: ಧರ್ಮಸ್ಥಳದಲ್ಲಿ 63 ಶಾಸಕರಿಂದ ಆಣೆ-ಪ್ರಮಾಣಕ್ಕೆ ಸಿದ್ಧತೆ

ಬೆಂಗಳೂರು, ಜೂ. 22: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ನಿರೀಕ್ಷಿತ ಮತಗಳು ಲಭಿಸದ ಹಿನ್ನೆಲೆಯಲ್ಲಿ ಪಕ್ಷದೊಳಗೆ ಅಡ್ಡಮತದಾನದ ಆರೋಪಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ ಬಿಜೆಪಿ ನಾಯಕತ್ವ ಮಹತ್ವದ ಹಾಗೂ ಕಠಿಣ ನಿರ್ಧಾರವೊಂದನ್ನು ಕೈಗೊಂಡಿದ್ದು, ಪಕ್ಷದ ಎಲ್ಲಾ 63 ಶಾಸಕರಿಂದ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ-ಪ್ರಮಾಣ ಮಾಡಿಸಲು ಮುಂದಾಗಿದೆ.

ಅಡ್ಡಮತದಾನದ ಮೂಲಕ ಪಕ್ಷಕ್ಕೆ ದ್ರೋಹ ಎಸಗಿದವರು ಯಾರು ಎಂಬುದನ್ನು ಪತ್ತೆಹಚ್ಚುವ ಉದ್ದೇಶದಿಂದ ಧರ್ಮಸ್ಥಳದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ವಿಶೇಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ವಾರ ಅಥವಾ ಮುಂದಿನ ವಾರ ಸಭೆ ನಡೆಯುವ ಸಾಧ್ಯತೆ ಇದ್ದು, ಎಲ್ಲಾ ಶಾಸಕರೂ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ವರು ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದ್ದು, ಈ ಬೆಳವಣಿಗೆ ಪಕ್ಷದ ಕಾರ್ಯಕರ್ತರಲ್ಲಿ ತೀವ್ರ ಬೇಸರ ಮೂಡಿಸಿದೆ ಎಂದು ಹೇಳಿದರು.

ಅಡ್ಡಮತದಾನದ ಆರೋಪದ ಕಾರಣ ಎಲ್ಲ 63 ಶಾಸಕರ ಮೇಲೂ ಅನುಮಾನ ವ್ಯಕ್ತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಬೇಕು ಎಂಬ ಉದ್ದೇಶದಿಂದ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.
ಈ ವಿಷಯವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿತಿನ್ ನಬಿನ್ ಅವರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ ಅವರು, ಶಾಸಕಾಂಗ ಪಕ್ಷದ ನಾಯಕ ಆರ್. ಅಶೋಕ್ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸಭೆಯ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಶಾಸಕರು ಆಣೆ-ಪ್ರಮಾಣ ಮಾಡುವ ಮೂಲಕ ಪಕ್ಷಕ್ಕೆ ದ್ರೋಹ ಮಾಡಿದವರು ಯಾರು ಎಂಬುದು ಬಹಿರಂಗವಾಗಲಿ ಎಂಬ ಆಶಯವನ್ನು ಪಕ್ಷದ ನಾಯಕರು ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ಮುಂದಿನ ನಡೆ ಏನಾಗಲಿದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.