ಡೈಲಿವಾರ್ತೆ: 27/ಜೂ./2026

ಶ್ರೀರಾಮನಿಗೆ ಅವಮಾನಕಾರಿ ಪೋಸ್ಟ್‌ ವೈರಲ್: ಬಸವಕಲ್ಯಾಣದಲ್ಲಿ ಉದ್ವಿಗ್ನತೆ, ಕಿಡಿಗೇಡಿಗಳ ವಿರುದ್ಧ ದೂರು ದಾಖಲು

ಬೀದರ್, ಜೂನ್ 27: ಬಸವಕಲ್ಯಾಣದಲ್ಲಿ ನಾಳೆ ನಡೆಯಲಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶಕ್ಕೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಭು ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳು ವೈರಲ್ ಆಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಜಿಲ್ಲೆಯ ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಮಹಾವಿದ್ಯಾಲಯದ ಆವರಣದಲ್ಲಿ ಕನ್ನೇರಿ ಶ್ರೀಗಳ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ ಆಯೋಜನೆಯಾಗಿದ್ದು, ಸಮಾವೇಶಕ್ಕೆ ಅನುಮತಿ ದೊರೆತ ಬೆನ್ನಲ್ಲೇ ‘ಬಸವಪರ ಸಂಘಟನೆಗಳ ಒಕ್ಕೂಟ’ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಪೋಸ್ಟ್‌ಗಳನ್ನು ಪ್ರಕಟಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಉದ್ದೇಶದಿಂದ ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕದಡುವ ಪ್ರಯತ್ನ ನಡೆದಿದೆ ಎಂದು ಹಲವು ಹಿಂದೂ ಸಂಘಟನೆಗಳು ಆರೋಪಿಸಿವೆ.

ಘಟನೆಗೆ ಸಂಬಂಧಿಸಿದಂತೆ ಹಿಂದೂ ಮುಖಂಡ ಕೃಷ್ಣ ಗೋಣೆ ಅವರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದು, ಜಗದ್ಗುರು ಬಸವಣ್ಣನವರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದೂ ದೇವರುಗಳಿಗೆ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅವರನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಂಬಂಧಿತ ಫೇಸ್‌ಬುಕ್ ಖಾತೆಯ ನಿರ್ವಹಣೆ ಹಾಗೂ ಪೋಸ್ಟ್‌ಗಳ ಮೂಲವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆ ಮುಂದುವರಿಸಿದ್ದಾರೆ.
ಇದೇ ವೇಳೆ ನಾಳೆ ನಡೆಯಲಿರುವ ಬೃಹತ್ ಸಮಾವೇಶದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಸವಕಲ್ಯಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಪರಿಶೀಲಿಸದ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.