


ಡೈಲಿವಾರ್ತೆ: 27/ಜೂ./2026


ಓಮ್ನಿ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ – ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ದುರ್ಮರಣ

ಕೊಪ್ಪಳ: ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಐವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಸಮೀಪ ಶನಿವಾರ ನಡೆದಿದೆ.
ಮೃತರನ್ನು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45), ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಎಂದು ಗುರುತಿಸಲಾಗಿದೆ.
ಮಂತ್ರಾಲಯಕ್ಕೆ ತೆರಳುತ್ತಿದ್ದ ಓಮ್ನಿ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಪಕ್ಕದ ರಸ್ತೆಯಿಂದ ಬಂದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಓಮ್ನಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಕುಕನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.