


ಡೈಲಿವಾರ್ತೆ: 27/ಜೂ./2026


ತುಮಕೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ: ಯುವತಿಗೆ ಚಾಕು ಇರಿದು ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆ!

ತುಮಕೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನೊಳಗೆ ಪ್ರೇಮಿಗಳ ನಡುವೆ ನಡೆದ ಗಲಾಟೆ ಭೀಕರ ದುರಂತದಲ್ಲಿ ಅಂತ್ಯವಾಗಿದೆ. ಪ್ರೇಯಸಿಗೆ ಚಾಕುವಿನಿಂದ ಇರಿದ ಯುವಕನೊಬ್ಬ, ಬಳಿಕ ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿರುವ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಬೆಂಗಳೂರು ಮೂಲದ ನಾಗೇಂದ್ರ (30) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಯುವತಿಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಅಂಕೋಲಕ್ಕೆ ಹೊರಟಿದ್ದ ಜೋಡಿ:
ಪೊಲೀಸ್ ಮೂಲಗಳ ಪ್ರಕಾರ, ನಾಗೇಂದ್ರ ಮತ್ತು ಯುವತಿ ಬೆಂಗಳೂರಿನಿಂದ ಬಾಡಿಗೆ ಕಾರೊಂದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಕ್ಕೆ ತೆರಳುತ್ತಿದ್ದರು. ತುಮಕೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಕಾರು ಚಲಿಸುತ್ತಿದ್ದಾಗ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ, ಆಕ್ರೋಶಗೊಂಡ ನಾಗೇಂದ್ರ ಮೊದಲಿಗೆ ಯುವತಿಯ ತಲೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ.
ಪೂರ್ವಯೋಜಿತ ಕೃತ್ಯದ ಶಂಕೆ: ಪೆಟ್ರೋಲ್ ಬಾಂಬ್ ಬಳಕೆ:
ಯುವತಿ ರಕ್ತದ ಮಡುವಿನಲ್ಲಿ ಬೀಳುತ್ತಿದ್ದಂತೆ, ನಾಗೇಂದ್ರ ತಾನು ಮೊದಲೇ ಸಿದ್ಧಪಡಿಸಿಕೊಂಡು ತಂದಿದ್ದ ಪೆಟ್ರೋಲ್ ಬಾಂಬ್ ಅನ್ನು ಕಾರಿನೊಳಗೆ ಸಿಡಿಸಿಕೊಂಡಿದ್ದಾನೆ. ಕ್ಷಣಾರ್ಧದಲ್ಲಿ ಕಾರು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದು, ನಾಗೇಂದ್ರ ಸ್ಥಳದಲ್ಲೇ ಸಜೀವ ದಹನವಾಗಿದ್ದಾನೆ. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ರಕ್ಷಿಸಿ ಆಸ್ಪತ್ರೆಗೆ ರವಾನಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸ್ ತನಿಖೆ ಚುರುಕು:
ನಾಗೇಂದ್ರ ಮೊದಲೇ ಪ್ಲ್ಯಾನ್ ಮಾಡಿ, ಕಾರಿನಲ್ಲಿ ಪೆಟ್ರೋಲ್ ಬಾಂಬ್ ಅಡಗಿಸಿಟ್ಟುಕೊಂಡು ಬಂದಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೇಲ್ನೋಟಕ್ಕೆ ಇದು ಪ್ರೇಮ ವೈಫಲ್ಯ ಅಥವಾ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ನಡೆದಿರುವ ಕೃತ್ಯದಂತೆ ಕಾಣಿಸುತ್ತಿದೆ.
ಘಟನೆ ನಡೆದ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಶೋಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಸ್ಥಳಕ್ಕೆ ಆಗಮಿಸಿ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.