ಡೈಲಿವಾರ್ತೆ: 05/ಜು./2026

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ₹80 ಸಾವಿರ ಕಳವು: 24 ಗಂಟೆಯಲ್ಲೇ ಮೂವರು ಮಹಿಳಾ ಆರೋಪಿಗಳ ಬಂಧನ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಮೂವರು ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಭದ್ರಾವತಿಯ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಗುರುತಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜುಲೈ 5ರಂದು ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಅವರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಆಗಮಿಸಿದ್ದರು. ಬೆಳಿಗ್ಗೆ ಸುಮಾರು 8.20 ಗಂಟೆಗೆ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ ನಿಮಿಶಾ ಅವರ ಕಂದು ಬಣ್ಣದ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಹೊಂದಿದ್ದ ಪರ್ಸ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ದೇವಸ್ಥಾನದ ಆವರಣದಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ನಿಮಿಶಾ ಅವರು ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ನೇತೃತ್ವದ ತಂಡವು ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ನೆರವಿನಿಂದ ತನಿಖೆ ನಡೆಸಿ, ಪ್ರಕರಣ ದಾಖಲಾದ 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ದುರ್ಗಮ್ಮ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಎರಡು ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮತ್ತೊಬ್ಬ ಆರೋಪಿ ಶಾರದ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಹಾಗೂ ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ಮೂರು ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಪ್ರಕರಣವನ್ನು ಶೀಘ್ರವಾಗಿ ಭೇದಿಸುವಲ್ಲಿ ತನಿಖಾಧಿಕಾರಿ ಪಿಎಸ್‌ಐ ಭೀಮಶಂಕರ್, ಹೆಡ್ ಕಾನ್ಸ್‌ಟೇಬಲ್ ರತ್ನಾಕರ, ಪೊಲೀಸ್ ಕಾನ್ಸ್‌ಟೇಬಲ್ ಸಂತೋಷ್, ಕುಂದಾಪುರ ಠಾಣೆಯ ಸಿಬ್ಬಂದಿ ಘನಶ್ಯಾಮ್, ಪದ್ಮಾವತಿ ಹಾಗೂ ಬೈಂದೂರು ಠಾಣೆಯ ಚಂದ್ರಶೇಖರ್ ಅವರ ತಂಡ ಪ್ರಮುಖ ಪಾತ್ರವಹಿಸಿದೆ.