ಡೈಲಿವಾರ್ತೆ: 06/ಜು./2026

ಬಂಟ್ವಾಳ: ಮೋಂತಿಮಾರು ಬಸ್‌ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿತ, ಆರೋಪಿ ಪರಾರಿ!

ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ವರದಿಯಾಗಿದೆ.

ಆರೋಪಿ ಮೋಂತಿಮಾರು ಪಡ್ಪು ನಿವಾಸಿ ಜವ್ವಾರ್ (28) ಎಂದು ತಿಳಿದುಬಂದಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿನಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಇತರ ಪ್ರಯಾಣಿಕರು ಘಟನೆ ಕಂಡು ಜೋರಾಗಿ ಕಿರುಚಿದ ಪರಿಣಾಮ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಆಸ್ಪತ್ರೆಗೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸ್ ತನಿಖೆಯ ಬಳಿಕವೇ ವಾಸ್ತವಾಂಶ ಹೊರಬೀಳಬೇಕಿದ್ದು, ಪರಾರಿಯಾಗಿರುವ ಆರೋಪಿಯು ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.