


ಡೈಲಿವಾರ್ತೆ: 10/ಜು./2026


ಮಣಿಪಾಲ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಶಾಲಾ ಬಸ್ – 7 ಮಂದಿ ವಿದ್ಯಾರ್ಥಿಗಳಿಗೆ ಗಾಯ!

ಮಣಿಪಾಲ: ಇಲ್ಲಿನ ಕ್ರೈಸ್ಟ್ ಶಾಲೆಯ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಧೃತಿಗೆಡಿಸುವ ಘಟನೆ ಮಣಿಪಾಲದ ಸರಳಬೆಟ್ಟು ಕೊಡಂಗೆ ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಏಳು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಲ್ಲಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಶುಕ್ರವಾರ ಬೆಳಿಗ್ಗೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಕೊಡಂಗೆ ದೇವಸ್ಥಾನದ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ಹಾಗೂ ದಾರಿಹೋಕರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಬಸ್‌ನಲ್ಲಿದ್ದ ಮುಗ್ಧ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದು, ಸಾರ್ವಜನಿಕರ ಸಹಾಯದೊಂದಿಗೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಬಸ್ ನೇರವಾಗಿ ರಸ್ತೆ ಬದಿಯ ಆಳವಾದ ಕಂದಕಕ್ಕೆ ಉರುಳಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.