ಡೈಲಿವಾರ್ತೆ: 17/ಜು./2026

ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಆರೋಪಿ ಬಂಧನ, ವಿಷ ಸೇವಿಸಿ ಆಸ್ಪತ್ರೆಗೆ ದಾಖಲು

ಬಂಟ್ವಾಳ, ಜು. 17: ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧನದ ವೇಳೆ ಆರೋಪಿ ವಿಷ ಸೇವಿಸಿದ್ದರಿಂದ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹತ್ಯೆಗೀಡಾದ ಯುವತಿಯನ್ನು ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಲಾವಣ್ಯಾ (21) ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ನಿವಾಸಿ ಹಾಗೂ ಮೃತಳ ದೂರದ ಸಂಬಂಧಿಯಾಗಿರುವ ಚೇತನ್ (22) ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರ ಮಾಹಿತಿ ಪ್ರಕಾರ, ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧನದ ವೇಳೆ ಆತ ಇಲಿ ಪಾಷಾಣ ಸೇವಿಸಿದ್ದರಿಂದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಚೇತನ್ ಲಾವಣ್ಯಾಳನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಮೃತ ಲಾವಣ್ಯಾ ಕಳೆದ ಎಂಟು ತಿಂಗಳಿಂದ ಕಲ್ಲಡ್ಕ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ಸಂಜೆ ಕರ್ತವ್ಯ ಮುಗಿಸಿ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಲಾವಣ್ಯಾ, ಕಕ್ಯೆಪದವು ಕಡೆಗೆ ತೆರಳಲು ಬಸ್‌ನಲ್ಲಿ ಕುಳಿತಿದ್ದ ವೇಳೆ ಆರೋಪಿ ಅಲ್ಲಿಗೆ ಬಂದಿದ್ದಾನೆ. ಆತನನ್ನು ಕಂಡು ಆತಂಕಗೊಂಡ ಲಾವಣ್ಯಾ ಬಸ್‌ನಿಂದ ಇಳಿದು ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಬೆನ್ನಟ್ಟಿದ ಆರೋಪಿ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಮಧ್ಯಪ್ರವೇಶಿಸಲು ಮುಂದಾದ ಸಾರ್ವಜನಿಕರಿಗೂ ಬೆದರಿಕೆ ಹಾಕಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಕುರಿತು ಬಂಟ್ವಾಳ ನಗರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಏಕಪಕ್ಷೀಯ ಪ್ರೀತಿಯೇ ಕೃತ್ಯಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ.