ಡೈಲಿವಾರ್ತೆ:18/ಆಗಸ್ಟ್ /2026

ಬ್ರಹ್ಮರಕೂಟ್ಲು ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ “ಡಿಸಿ ಕಚೇರಿ ಚಲೋ” ಪಾದಯಾತ್ರೆ

ಬಂಟ್ವಾಳ : ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಕ್ರಮ ಟೋಲ್ ಗೇಟ್ ಕೂಡಲೇ ಮುಚ್ಚಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಮಂಗಳವಾರ ‘ಡಿಸಿ ಕಚೇರಿ ಚಲೋ’ ಪಾದಯಾತ್ರೆ ನಡೆಯಿತು.

ಬ್ರಹ್ಮರಕೂಟ್ಲು ಟೋಲ್ ಗೇಟ್‌ನಿಂದ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಟೋಲ್ ವಸೂಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆಗೆ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ ಅವರು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರಿಗೆ ಪಂಜು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಸರ್ಕಾರ ಕೂಡಲೇ ಮುಚ್ಚಬೇಕು ಹಾಗೂ ಜನರ ಮೇಲಿನ ಈ ಹಗಲು ದರೋಡೆಯನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಬೇಡಿಕೆ ಈಡೇರಿಸಲು ಸರ್ಕಾರ ವಿಫಲವಾದರೆ ಎಸ್‌ಡಿಪಿಐ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ನೇರವಾಗಿ ಬ್ರಹ್ಮರಕೂಟ್ಲಿಗೆ ಮರಳಿ ನಾಗರಿಕರನ್ನು ಒಗ್ಗೂಡಿಸಿ ಟೋಲ್ ಗೇಟ್ ತೆರವುಗೊಳಿಸುವ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಎಸ್‌ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಮಾತನಾಡಿ, ಕಾರ್ಮಿಕರ ಬದುಕಿಗೆ ಹೊರೆೆಯಾಗಿರುವ ಬ್ರಹ್ಮರಕೂಟ್ಲು ಟೋಲ್ ಗೇಟ್ ಕಡ್ಡಾಯವಾಗಿ ತೆರವುಗೊಳ್ಳಬೇಕು ಎಂದು ಒತ್ತಾಯಿಸಿದರು. ಎಸ್‌ಡಿಟಿಯು ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಮಾತನಾಡಿ, ಟೋಲ್ ಗೇಟ್ ತೆರವುಗೊಳ್ಳುವವರೆಗೆ ಹೋರಾಟ ನಿಲ್ಲದು. ಲೋಕಸಭಾ ಸದಸ್ಯರು ಜನರ ಪರವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಟೋಲ್ ಗೇಟ್ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ಅನಧಿಕೃತ ಟೋಲ್ ವಸೂಲಿಯನ್ನು ತೀವ್ರವಾಗಿ ಖಂಡಿಸಿದರು. ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಅವರು, ಶಾಂತಿಯುತವಾಗಿ ಮನವಿ ಸಲ್ಲಿಸಲು ಬಂದಿರುವ ಪ್ರತಿಭಟನಾಕಾರರ ಮನವಿಯನ್ನು ಜಿಲ್ಲಾಧಿಕಾರಿಯೇ ಪ್ರತಿಭಟನಾ ಸ್ಥಳಕ್ಕೆ ಬಂದು ಸ್ವೀಕರಿಸಬೇಕು ಎಂದು ಒತ್ತಾಯಿಸಿದರು. ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೆದ್ದಾರಿ ಸ್ತಬ್ಧಗೊಳಿಸುವ ಮೂಲಕ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫಾನ್ಸೋ ಫ್ರಾಂಕೋ ಮಾತನಾಡಿ, ಅಕ್ರಮ ಟೋಲ್ ಗೇಟ್ ಸಂಪೂರ್ಣವಾಗಿ ತೆರವಾಗುವವರೆಗೆ ಎಸ್‌ಡಿಪಿಐ ನಿರಂತರ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು ಜಿಲ್ಲಾಧಿಕಾರಿಯವರ ಪರವಾಗಿ ಮನವಿ ಸ್ವೀಕರಿಸಲು ಆಗಮಿಸಿದ್ದ ಅಧಿಕಾರಿಗಳ ಮುಂದೆ ಪಕ್ಷದ ಬೇಡಿಕೆಗಳನ್ನು ಮಂಡಿಸಿ ಮನವಿ ಪತ್ರವನ್ನು ಹಸ್ತಾಂತರಿಸಿದರು.

ಪಾದಯಾತ್ರೆಯಲ್ಲಿ ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು, ಯಂಗ್ ಡೆಮಾಕ್ರಟ್ಸ್ ರಾಜ್ಯ ಜಾಯಿಂಟ್ ಕನ್ವೀನರ್ ಮೂನಿಶ್ ಅಲಿ, ಎಸ್‌ಡಿಟಿಯು ಗ್ರಾಮಾಂತರ ಜಿಲ್ಲಾಧ್ಯಕ್ಷ ಪಿಲಿಪ್ ಹೆನ್ರಿ ಡಿ ಸೋಜ, ಎಸ್‌ಡಿಟಿಯು ನಗರ ಜಿಲ್ಲಾಧ್ಯಕ್ಷ ಅಬ್ದುಲ್ ರಹಿಮಾನ್ ಬೋಳಿಯಾರ್, ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಕಾರ್ಯದರ್ಶಿ ಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಳಕೆಮಜಲು, ನವಾಝ್ ಕಟ್ಟೆ, ಎಸ್‌ಡಿಪಿಐ ನಗರ ಉಪಾಧ್ಯಕ್ಷ ಅಝೀಝ್ ಸುರತ್ಕಲ್, ನಗರ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಯಾಸಿನ್ ಅರ್ಕುಳ ಸೇರಿದಂತೆ ವಿವಿಧ ಅಸೆಂಬ್ಲಿ ನಾಯಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.