ಡೈಲಿವಾರ್ತೆ:20/ಆಗಸ್ಟ್ /2026

ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು!

ರಾಣಿಬೆನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಆ. 20 ರಂದು ಗುರುವಾರ ರಾಣಿಬೆನ್ನೂರು ತಾಲ್ಲೂಕಿನ ಚಳಗೇರಿ ಟೋಲ್ ಬಳಿ ಸಂಭವಿಸಿದೆ.

ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ದಾರ್ಥ(27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಎಂದು ಗುರುತಿಸಲಾಗಿದೆ.
ಇನ್ನು ಗಂಭೀರ ಗಾಯಗೊಂಡ ಸೌಂದರ್ಯ(26), ಸಿಂಧೂ(24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಅವರನ್ನು ದಾವಣಗೆರೆ S.S. ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಣೇಬೆನ್ನೂರಿನಿಂದ ದಾವಣಗೆರೆ ಹೋಗುತ್ತಿದ್ದ ವೇಳೆ ಚಳಗೇರಿ ಟೋಲ್ ಗೇಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.