ಡೈಲಿವಾರ್ತೆ:20/ಆಗಸ್ಟ್ /2026

ಮುದರಂಗಡಿ ಡೇವಿಡ್‌ ಡಿಸೋಜಾ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಉಡುಪಿ: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಪ್ರಿನ್ಸ್ ಎಂಟರ್‌ಪ್ರೈಸಸ್‌ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆ. 7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮೋಟಾ‌ರ್ ಸೈಕಲ್‌ನಲ್ಲಿ ಬಂದ ಆರೋಪಿಗಳ ಪೈಕಿ ಸಹಸವಾರನು ಪಿಸ್ತೂಲ್‌ನಿಂದ ಡೇವಿಡ್ ಡಿಸೋಜಾ ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸದ್ರಿ ಪ್ರಕರಣದಲ್ಲಿ ಈಗಾಗಲೇ ನೇರವಾಗಿ ಬಾಗಿಯಾದ ಆರೋಪಿತರಾದ ಅನ್ಮೋಲ್ ರಸ್ತೋಗಿ ಮತ್ತು ಜಿಯಾಹುಲ್ ವಾಜುಲ್ ಶೇಖ್ @ ದೀಪಕ್‌ ರವರನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸದರಿ ಪ್ರಕರಣದಲ್ಲಿನ 1 ನೇ ಆರೋಪಿ ರಾಜು ಈತನ ಮೇಲೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಸರ್ಕಾರಿ ನೌಕರರ ಮೇಲೆ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು ಜಿಲ್ಲಾ ಸರ್ಕಾರಿ ಆಸ್ಪತ್ರೆ ಅಜ್ಜರಕಾಡು ಇಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದು ಸದ್ರಿ ಆರೋಪಿಯು ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಿಸಲಾಗುವುದು

ಸದರಿ ಪ್ರಕರಣದಲ್ಲಿ ಈ ಕೃತ್ಯ ಮಾಡಲು ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ, ಹಣಕಾಸು ಪೂರೈಕೆ ಮಾಡಿದ ಮೊಹಮ್ಮದ್‌ ಇರ್ಷಾದ್‌ ,ಚಿರಾಗ್‌ ಪೂಜಾರಿ, ಸದಾನಂದ ದೇವಾಡಿಗ ಮತ್ತು ಕಿಶೋರ್ ರಾಮ ಪೂಜಾರಿ ಎಂಬವರುಗಳನ್ನು ಆರೋಪಿತರನ್ನು ದಸ್ತಗಿರಿ ಮಾಡಿ ಈಗಾಗಲೇ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

ಈ ನಡುವೆ ತಲೆಮರೆಸಿಕೊಂಡಿದ್ದ ಸೂರಜ್ ಕುಮಾರ್ (31), ಅರ್ಜುನ್‌ ಪ್ರಸಾದ್‌ ಅವರ ಪುತ್ರ ಕಟ್ಟಾರಿ ಶೇಖ್‌ಪುರ ಬಿಹಾರ ರಾಜ್ಯ ಎಂಬಾತನನ್ನು ಆರೋಪಿಗಳ ಪತ್ತೆಗಾಗಿ ವಿಶೇಷ ಕರ್ತವ್ಯದಲ್ಲಿ ತೆರಳಿದ್ದ ಕುಂದಾಪುರ ಪೊಲೀಸರು ಉತ್ತರಾಖಂಡ ರಾಜ್ಯದ ನೈನಿತಾಲ್ ಜಿಲ್ಲೆಯ ಹಲ್ದ್‌ವಾನಿ ಬಳಿ
ಪ್ರದೇಶದ ಬಳಿ ವಶಕ್ಕೆ ಪಡೆದಿದ್ದಾರೆ.

ನಂತರ ಆರೋಪಿಯನ್ನು ಪ್ರಕರಣದ ತನಿಖಾಧಿಕಾರಿಯವರ ಮುಂದೆ ಹಾಜರುಪಡಿಸಿ ಬಂಧಿಸಲಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಸೂರಜ್ ಕುಮಾರ್‌ನನ್ನು ಆಗಸ್ಟ್ 20ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಪ್ರಕರಣದ ತನಿಖೆ ಮುಂದುವರೆದಿದೆ.