


ಡೈಲಿವಾರ್ತೆ:21/ಆಗಸ್ಟ್ /2026

ಕಾರ್ಕಳ: ಕಾಲೇಜು ಹಾಸ್ಟೆಲ್‌ನಲ್ಲೇ ಪ್ರಜ್ಞೆ ತಪ್ಪಿ ಬಿದ್ದ ಪಿಯುಸಿ ವಿದ್ಯಾರ್ಥಿ ಸಾವು

ಕಾರ್ಕಳ: ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಯೋರ್ವ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ಆಗಸ್ಟ್ 21ರಂದು ಶುಕ್ರವಾರ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಖಾಸಗಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ತುಮಕೂರು ಜಿಲ್ಲೆಯ ತಿಪಟೂರಿನ ಎ.ಆರ್. ಮಂಜುನಾಥ್ ಎಂಬುವರ ಪುತ್ರ ಚಿರಾಗ್ (16) ಎಂದು ಗುರುತಿಸಲಾಗಿದೆ.
ಚಿರಾಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ. ಆ. 21 ರಂದು ಶುಕ್ರವಾರ ಬೆಳಿಗ್ಗೆ 7.30ರ ಸುಮಾರಿಗೆ ಕಾಲೇಜು ಆವರಣದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.
ತಕ್ಷಣವೇ ಆಡಳಿತ ಮಂಡಳಿಯವರು ಆತನನ್ನು ಚಿಕಿತ್ಸೆಗಾಗಿ ಕಾರ್ಕಳದ ಟಿ.ಎಂ.ಎ ಪೈ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕ ಈಗಾಗಲೇ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮೃತನ ತಂದೆ ಎ.ಆರ್. ಮಂಜುನಾಥ್ ನೀಡಿರುವ ದೂರಿನನ್ವಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 34/2026, ಕಲಂ: 194 BNSS ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.