ಡೈಲಿವಾರ್ತೆ:22/ಆಗಸ್ಟ್ /2026

ಶಾಲೆಯಲ್ಲಿ ನೀಡಿದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆ: 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಗದಗ: ಶಾಲೆಯಲ್ಲಿ ನೀಡಿದ ಬೆಳಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಲ್ಲಿ ಪತ್ತೆಯಾಗಿದ್ದು ಉಪಹಾರ ಸೇವಿಸಿದ 80 ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಆ. 22 ರಂದು ಶನಿವಾರ ಮುಂಡರಗಿ ತಾಲ್ಲೂಕಿನ ಬೀಡನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಶಾಲೆಯಲ್ಲಿ ಮಕ್ಕಳಿಗಾಗಿ ಬೆಳಗಿನ ಉಪಾಹಾರಕ್ಕೆ ಉಪ್ಪಿಟ್ಟು ನೀಡಲಾಗಿತ್ತು. ಆದರೆ ಈ ಉಪ್ಪಿಟ್ಟಿನಲ್ಲಿ ಹಲ್ಲಿ ಬಿದ್ದಿರುವುದು ಸಿಬಂದಿಯ ಗಮನಕ್ಕೆ ಬಂದಿದೆ. ತಕ್ಷಣವೇ ಮಕ್ಕಳಿಗೆ ಉಪಾಹಾರ ವಿತರಿಸುವುದನ್ನು ಸ್ಥಗಿತಗೊಳಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸುಮಾರು 80 ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿದ್ದರು ಎನ್ನಲಾಗಿದೆ.

ಉಪಾಹಾರ ಸೇವಿಸಿದ ವಿದ್ಯಾರ್ಥಿಗಳಲ್ಲಿ ಕೆಲವೇ ಹೊತ್ತಿನಲ್ಲಿ ತಲೆನೋವು, ವಾಂತಿ ಸೇರಿದಂತೆ ಅಸ್ವಸ್ಥತೆಯ ಲಕ್ಷಣಗಳು ಕಾಣಿಸಿಕೊಂಡಿವೆ. ವಿಷಯ ತಿಳಿದ ಕೂಡಲೇ ಗ್ರಾಮಸ್ಥರು ಹಾಗೂ ಶಾಲಾ ಸಿಬಂದಿ ಆತಂಕಗೊಂಡು ಅಸ್ವಸ್ಥ ವಿದ್ಯಾರ್ಥಿಗಳನ್ನು ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಇಒ ಗಂಗಾಧರ ಅವರು ಬೀಡನಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಉಪ್ಪಿಟ್ಟು ಸೇವಿಸಿದ ಸುಮಾರು 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ಬಿಇಒ ಗಂಗಾಧರ ಅಣ್ಣಿಗೇರಿ ತಿಳಿಸಿದ್ದಾರೆ.