


ಡೈಲಿವಾರ್ತೆ:26/ಆಗಸ್ಟ್ /2026

ಬೆಂಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ: ಬಸವನಗುಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಗಲಾಟೆ ಹಾಗೂ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡೆದಿರುವ ಘಟನೆ ಬುಧವಾರ ನಗರದ ಬಸವನಗುಡಿಯ ಕೆ.ಆರ್. ರಸ್ತೆಯಲ್ಲಿ ನಡೆದಿದೆ.
ಪುನೀತ್ ಕೆರೆಹಳ್ಳಿ ಅವರ ಕಚೇರಿ ಎದುರು ಮೆರವಣಿಗೆ ಸಾಗುತ್ತಿದ್ದ ವೇಳೆ ಘೋಷಣೆ ಕೂಗಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿಯಿಂದ ಗಲಾಟೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಇದೇ ವೇಳೆ ಮುರಳಿ ಎಂಬುವವರ ಮೇಲೆ ಗುಂಪು ಹಲ್ಲೆ ನಡೆಸಿದ್ದು ಅವರ ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡ ಮುರಳಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಖಂಡಿಸಿ ಪುನೀತ್ ಕೆರೆಹಳ್ಳಿ ಹಾಗೂ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಸವನಗುಡಿ ಪೊಲೀಸರು ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಈ ನಡುವೆ ಮೆರವಣಿಗೆ ವೇಳೆ ಮುಸ್ಲಿಂ ಮುಖಂಡರು ಬೀಸುತ್ತಿದ್ದ ಬಾವುಟ ಮುರಳಿಗೆ ತಾಗಿದ ಬಳಿಕ ಗಲಾಟೆ ಆರಂಭವಾಗಿರುವ ಸಾಧ್ಯತೆಯ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪುನೀತ್ ಕೆರೆಹಳ್ಳಿ ಹಾಗೂ ಅವರ ತಂಡದಿಂದಲೂ ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪ ಕೇಳಿಬಂದಿದೆ.
ಘಟನೆಯ ನಿಖರ ಕಾರಣ ಹಾಗೂ ಗಲಾಟೆಯ ಸಂದರ್ಭದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು ಸ್ಥಳದ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬಸವನಗುಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.