


ಡೈಲಿವಾರ್ತೆ:05/ಸೆ./2026

ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಕಳ್ಳತನ – ಇಬ್ಬರು ಆರೋಪಿಗಳ ಬಂಧನ

ಪುತ್ತೂರು : ಮಂಗಳೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗುತ್ತಿದ್ದ ಲಾರಿ ಹಾಗೂ ಇತರ ವಾಹನಗಳ ಇಂಧನ ಟ್ಯಾಂಕ್‌ಗಳನ್ನು ಗುರಿಯಾಗಿಸಿಕೊಂಡು ಡೀಸೆಲ್ ಕಳ್ಳತನ ನಡೆಸುತ್ತಿದ್ದ ಮಂಡ್ಯ ಮೂಲದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಚೇಸ್ ಮಾಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿವಾಸಿಗಳಾದ ಜೈಮುತ್ತಾ (23) ಹಾಗೂ ಮುತ್ತು (28) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 3ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬೈಕ್‌ನಲ್ಲಿ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದರು. ಈ ವೇಳೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ತಲುಪಿದಾಗ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್ ಒಂದರ ಬಳಿ ಬೊಲೆರೋ ಪಿಕ್‌ಅಪ್ ವಾಹನ ನಿಂತಿರುವುದು ಕಂಡುಬಂದಿದೆ.
ವಾಹನದ ಸುತ್ತ ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಪರಿಶೀಲನೆಗೆ ಮುಂದಾದಾಗ, ಪೊಲೀಸರ ಬೈಕ್ ಸದ್ದು ಕೇಳಿ ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಸಿಬ್ಬಂದಿಗಳು ಚೇಸ್ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ವಿಚಾರಣೆ ವೇಳೆ ಹೆದ್ದಾರಿ ಬದಿ ನಿಲ್ಲಿಸಲಾಗುತ್ತಿದ್ದ ವಾಹನಗಳ ಇಂಧನ ಟ್ಯಾಂಕ್‌ಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಸ್ಥಳ ಪರಿಶೀಲನೆ ನಡೆಸಿದ ಪೊಲೀಸರು ಕಳ್ಳತನಕ್ಕೆ ಬಳಸಲಾಗುತ್ತಿದ್ದ ಬೊಲೆರೋ ಪಿಕ್‌ಅಪ್ ವಾಹನ, ಕ್ಯಾನ್‌ಗಳಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 20 ಲೀಟರ್ ಡೀಸೆಲ್, ಕಳ್ಳತನಕ್ಕೆ ಬಳಸುತ್ತಿದ್ದ ರಬ್ಬರ್ ಪೈಪ್ ಹಾಗೂ ಹಲವು ಖಾಲಿ ಕ್ಯಾನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 118/2026 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.