


ಡೈಲಿವಾರ್ತೆ:05/ಸೆ./2026

ಕುಂದಾಪುರ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ:
ಕ್ರೀಡೆ ವಿದ್ಯಾರ್ಥಿಗಳ ಬದುಕಿನ ಆರೋಗ್ಯದ ಜೊತೆಗೆ ಉತ್ತಮ ಭವಿಷ್ಯ ರೂಪಿಸುತ್ತದೆ: ಪ್ರೊ. ಗಜಾನನ ಪ್ರಭು

ಕುಂದಾಪುರ, ಸೆ. 5: ಕ್ರೀಡೆಯು ವಿದ್ಯಾರ್ಥಿಗಳಲ್ಲಿ ದೈಹಿಕ ಆರೋಗ್ಯ, ಶಿಸ್ತು, ಸಂಯಮ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವುದರ ಜತೆಗೆ ಉತ್ತಮ ವೃತ್ತಿ ಬದುಕಿಗೂ ದಾರಿ ಮಾಡಿಕೊಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಗಜಾನನ ಪ್ರಭು ಹೇಳಿದರು.

ಶನಿವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾಲಿಬಾಲ್ ಸೇರಿದಂತೆ ಯಾವುದೇ ಕ್ರೀಡೆಯಲ್ಲಿ ಸಾಧನೆ ಮಾಡಲು ವಿದ್ಯಾರ್ಥಿಗಳು ಸ್ಪಷ್ಟ ಗುರಿ, ಶಿಸ್ತು ಹಾಗೂ ನಿರಂತರ ಪರಿಶ್ರಮವನ್ನು ಮೈಗೂಡಿಸಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ಸಾಧನೆ ಮಾಡಿದ ಬಳಿಕ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶಗಳು ದೊರೆಯುತ್ತವೆ. ಹೀಗಾಗಿ ವಿದ್ಯಾರ್ಥಿಗಳು ದೊಡ್ಡ ಕನಸುಗಳನ್ನು ಹೊಂದಿ ಕ್ರೀಡಾ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂದರು.
ಪಂದ್ಯಾಟದಲ್ಲಿ ಭಾಗವಹಿಸಿರುವ ಅನೇಕ ವಿದ್ಯಾರ್ಥಿಗಳು ವಾಲಿಬಾಲ್‌ನಲ್ಲಿ ಸಾಧನೆ ಮಾಡುವ ಕನಸಿನೊಂದಿಗೆ ಆಗಮಿಸಿದ್ದು, ಈ ಅವಕಾಶವನ್ನು ಕೇವಲ ಒಂದು ಪಂದ್ಯಾಟಕ್ಕೆ ಸೀಮಿತಗೊಳಿಸದೆ ತಮ್ಮ ಕ್ರೀಡಾ ಬದುಕಿನ ಮಹತ್ವದ ಆರಂಭವಾಗಿ ಪರಿಗಣಿಸಬೇಕು ಎಂದು ಕರೆ ನೀಡಿದರು.
ಶಿಕ್ಷಣದೊಂದಿಗೆ ಕ್ರೀಡೆ, ಸಂಸ್ಕೃತಿಗೂ ಆದ್ಯತೆ – ದಿನೇಶ್ ಹೆಗ್ಡೆ ಮೊಳಹಳ್ಳಿ:

ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದ ಆಹಾರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಮೊಳಹಳ್ಳಿ ದಿನೇಶ್ ಹೆಗ್ಡೆ, ವಿದ್ಯಾರ್ಥಿ ಜೀವನವು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಬಾರದು. ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಹಾಗೂ ಇತರ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಹೇಳಿದರು.
ವಿಶೇಷವಾಗಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಅಧ್ಯಯನಕ್ಕೆ ಮೀಸಲಿಡಬೇಕಾಗುತ್ತದೆ. ಆದರೆ ಪ್ರತಿದಿನ ಸ್ವಲ್ಪ ಸಮಯವನ್ನು ಕ್ರೀಡೆ ಅಥವಾ ದೈಹಿಕ ಚಟುವಟಿಕೆಗಳಿಗೆ ನೀಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಸೋಲು ಮತ್ತು ಗೆಲುವು ಜೀವನದ ಅವಿಭಾಜ್ಯ ಅಂಗಗಳು. ಸೋಲಿನಿಂದ ನಿರಾಶರಾಗದೆ ಅದರಿಂದ ಪಾಠ ಕಲಿತು ಆತ್ಮವಿಶ್ವಾಸದಿಂದ ಗುರಿಯತ್ತ ಮುನ್ನಡೆಯಬೇಕು. ಒಂದು ಪಂದ್ಯದಲ್ಲಿ ಸೋಲು ಎದುರಾದರೂ ಅದನ್ನು ಜೀವನದ ಸೋಲು ಎಂದು ಭಾವಿಸಬಾರದು. ಬದಲಾಗಿ ಮುಂದಿನ ಗೆಲುವಿಗೆ ಅದು ಮೆಟ್ಟಿಲಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಆಹಾರ ಮೇಳದಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಂಘಟನಾ ಸಾಮರ್ಥ್ಯ, ತಂಡದೊಂದಿಗೆ ಕೆಲಸ ಮಾಡುವ ಮನೋಭಾವ ಹಾಗೂ ಸ್ವಾವಲಂಬನೆಯನ್ನು ಬೆಳೆಸುತ್ತವೆ. ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ತಮ್ಮ ಪ್ರತಿಭೆ ಪ್ರದರ್ಶನಕ್ಕೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕ್ರೀಡೆಯೊಂದಿಗೆ ವಿದ್ಯಾಭ್ಯಾಸಕ್ಕೂ ಆದ್ಯತೆ: ಎಂ. ಮಹೇಶ್ ಹೆಗ್ಡೆ


ವಾಲಿಬಾಲ್ ಪಂದ್ಯಾಟದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎಂ. ಹೆಗ್ಡೆ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದರು.
ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ಸಮಯಪ್ರಜ್ಞೆ ಹಾಗೂ ತಂಡದೊಂದಿಗೆ ಕೆಲಸ ಮಾಡುವ ಮನೋಭಾವವನ್ನು ಬೆಳೆಸುತ್ತದೆ. ತರಗತಿಗಳ ಒತ್ತಡದ ನಡುವೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಹೊಸ ಚೈತನ್ಯ ದೊರೆಯುತ್ತದೆ. ಇದರಿಂದ ವಿದ್ಯಾಭ್ಯಾಸದಲ್ಲಿಯೂ ಹೆಚ್ಚಿನ ಆಸಕ್ತಿಯಿಂದ ತೊಡಗಿಸಿಕೊಳ್ಳಲು ಸಾಧ್ಯ ಎಂದರು.
ಎಕ್ಸಲೆಂಟ್ ವಿದ್ಯಾ ಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿದಿನ ಸಂಜೆ ತರಗತಿಗಳ ಬಳಿಕ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಸಂಜೆ ಸುಮಾರು 4ರಿಂದ 6 ಗಂಟೆಯವರೆಗೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಇನ್ನಷ್ಟು ಕ್ರೀಡಾ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂಸ್ಥೆಯ ಸಮೀಪದಲ್ಲಿರುವ ಸುಮಾರು ಎರಡು ಎಕರೆ ಪ್ರದೇಶವನ್ನು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ. ವಿದ್ಯಾರ್ಥಿಗಳು ಉತ್ತಮ ಕ್ರೀಡಾಪಟುಗಳಾಗಿ ಬೆಳೆಯುವುದರೊಂದಿಗೆ ವಿದ್ಯಾಭ್ಯಾಸದಲ್ಲಿಯೂ ಸಾಧನೆ ಮಾಡಬೇಕು ಎಂಬುದು ಸಂಸ್ಥೆಯ ಆಶಯವಾಗಿದೆ ಎಂದರು.
ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆ: ನಾಗರಾಜ್ ಶೆಟ್ಟಿ


ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಅಗತ್ಯವಾದ ಎಲ್ಲ ರೀತಿಯ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಸಂಸ್ಥೆಯು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಶಿಕ್ಷಣದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುತ್ತಿದೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವ ಮಾದರಿಯಲ್ಲಿಯೇ ಇದೇ ಪ್ರದೇಶದಲ್ಲಿ ಅತ್ಯುತ್ತಮ ಕ್ರೀಡಾ ಮೈದಾನವನ್ನು ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನೂ ಸಂಸ್ಥೆ ಹೊಂದಿದೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ಕಾರ್ಯ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೂ ಸಾರ್ವಜನಿಕರಿಗೂ ಪ್ರಯೋಜನಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕುಂದಾಪುರದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಿನಕರ ಹೆಗ್ಡೆ, ಕುಂದಾಪುರ ಪದವಿಪೂರ್ವ ಕಾಲೇಜು ನೌಕರ ಸಂಘದ ನಿರ್ದೇಶಕ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಸುಕೇಶ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಚಾಲಕ ರಾಮ ಶೆಟ್ಟಿ, ಎಕ್ಸಲೆಂಟ್ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಸರೋಜಿನಿ ಪಿ. ಆಚಾರ್ಯ ಹಾಗೂ ಸಿಬಿಎಸ್‌ಇ ವಿಭಾಗದ ಸಂಯೋಜಕಿ ವಿಶಾಲ ಶೆಟ್ಟಿ ಉಪಸ್ಥಿತರಿದ್ದರು.
ಶಿಕ್ಷಕ ರಸಿಕ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕ ಸಂದೀಪ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಲಕ್ಷ್ಮೀಕಾಂತ್ ವಂದಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕಾಲೇಜುಗಳ ಕ್ರೀಡಾಪಟುಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಬಗೆಯ ಆಹಾರ ಪದಾರ್ಥಗಳ ಮಳಿಗೆಗಳನ್ನು ಸ್ಥಾಪಿಸಿ ಆಯೋಜಿಸಿದ್ದ ಆಹಾರ ಮೇಳ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.


ವಾಲಿಬಾಲ್ ಪಂದ್ಯಾಟಕ್ಕೆ ಕುಂದಾಪುರ ತಾಲೂಕಿನಿಂದ ಬಾಲಕರ 14 ತಂಡಗಳು ಹಾಗೂ ಬಾಲಕಿಯರ 6 ತಂಡಗಳು ಸೇರಿದಂತೆ ಒಟ್ಟು 20 ತಂಡಗಳು ಭಾಗವಹಿಸಿದ್ದು ಅದ್ಭುತ ಸಾಧನೆ ಮಾಡಿ ಪ್ರಪ್ರಥಮ ಬಾರಿಗೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಮೂಡಿಗೇರಿಸಿಕೊಂಡಿದೆ. ಹಾಗೂ ದ್ವಿತೀಯ ಸ್ಥಾನದಲ್ಲಿ ಬಾಲಕರ ತಂಡ ಶಾರದಾ ಹೈಸ್ಕೂಲ್ ಬಸ್ರೂರು ಮತ್ತು ಬಾಲಕಿಯರ ತಂಡ ವೆಂಕಟರಮಣ ಕಾಲೇಜು, ಕುಂದಾಪುರ ಇವರು ಪಡೆದಿರುತ್ತಾರೆ.