


ಡೈಲಿವಾರ್ತೆ:06/ಸೆ./2026

ನವದೆಹಲಿ: ಐದು ಅಂತಸ್ತಿನ ಕಟ್ಟಡ ಕುಸಿತ – ಇಬ್ಬರು ವಿದ್ಯಾರ್ಥಿಗಳು ಮೃತ್ಯು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ನವದೆಹಲಿ: ಬಾಲಕರ ಹಾಸ್ಟೆಲ್ (ಪಿಜಿ) ಹೊಂದಿದ್ದ ಐದು ಅಂತಸ್ತಿನ ಕಟ್ಟಡವೊಂದು ಭಾನುವಾರ ಮಧ್ಯಾಹ್ನ ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಕುಸಿದು ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳಡಿ ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕಟ್ಟಡ ಕುಸಿತದ ಮಾಹಿತಿ ದೊರೆಯುತ್ತಿದ್ದಂತೆ ಅಗ್ನಿಶಾಮಕ ದಳ, ದೆಹಲಿ ಪೊಲೀಸರು, ಎನ್‌ಡಿಆರ್‌ಎಫ್ ಹಾಗೂ ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಎಂಟು ಮಂದಿಯನ್ನು ಅವಶೇಷಗಳಿಂದ ಹೊರತೆಗೆದಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ.
ನೆಲಮಹಡಿಯಲ್ಲಿ ಬಾಡಿಗೆ ಜಾಗಕ್ಕಾಗಿ ನವೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಕಟ್ಟಡ ಕುಸಿದಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆಯಿಂದ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪಕ್ಕದ ಕಟ್ಟಡವನ್ನೂ ತೆರವುಗೊಳಿಸಲಾಗಿದೆ.
ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ನೆರವು ಹಾಗೂ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸ್ಥಳೀಯರ ಪ್ರಕಾರ, ಕಟ್ಟಡ ಕುಸಿಯುವ ವೇಳೆ ಭಾರೀ ಸದ್ದಿನೊಂದಿಗೆ ಧೂಳು ಮತ್ತು ಹೊಗೆ ಆವರಿಸಿತ್ತು. ಅವಶೇಷಗಳಡಿಯಿಂದ ಕೆಲವರ ಧ್ವನಿ ಕೇಳಿಬರುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚುವ ಆತಂಕ ವ್ಯಕ್ತವಾಗಿದೆ.