ಡೈಲಿವಾರ್ತೆ:07/ಸೆ./2026

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ದಾಳಿ – ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದ್ದು, ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ.

ಭಾನುವಾರ ಸಂಜೆ ನಡೆದಿದ್ದ ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಆರೋಪಿ ಉಮೇಶ್ ನಾಯ್ಕ್ (27) ಪೊಲೀಸರ ಗುಂಡೇಟಿನಿಂದ ಗಾಯಗೊಂಡಿದ್ದಾನೆ.
ಆರೋಪಿಯನ್ನು ಬಂಧಿಸುವ ಉದ್ದೇಶದಿಂದ ಪೊಲೀಸರು ಲಿಂಗಾಪುರ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಪರಿಸ್ಥಿತಿ ನಿಯಂತ್ರಿಸಲು ಹಾಗೂ ಹಲ್ಲೆ ನಡೆಸದಂತೆ ತುಂಗಾನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗುರುರಾಜ್ ಕರ್ಕಿ ಗಾಳಿಯಲ್ಲಿ ಗುಂಡು ಹಾರಿಸಿ ಆರೋಪಿಗೆ ಎಚ್ಚರಿಕೆ ನೀಡಿದರು. ಆದರೂ ಆರೋಪಿ ಪೊಲೀಸರ ಮೇಲಿನ ದಾಳಿಯನ್ನು ಮುಂದುವರಿಸಿದ್ದರಿಂದ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡ ಉಮೇಶ್ ನಾಯ್ಕ್‌ನನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ವೇಳೆ ಆರೋಪಿಯ ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ತಮ್ಮಣ್ಣ ಜಂಬಗಿ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.