ಡೈಲಿವಾರ್ತೆ:12/ಸೆ./2026

ಹಾಸನ: ಪೆಟ್ರೋಲ್ ಟ್ಯಾಂಕರ್ ಪಲ್ಟಿ –
ಸಾವಿರಾರು ಲೀಟರ್ ಇಂಧನ ಸೋರಿಕೆ – ಬೆಂಕಿ ಅವಘಡದ ಭೀತಿಯಿಂದ ಸಂಚಾರ ಸ್ಥಗಿತ

ಹಾಸನ, ಸೆ.12: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ, ಸಾವಿರಾರು ಲೀಟರ್ ಇಂಧನ ರಸ್ತೆಗೆ ಸೋರಿಕೆಯಾದ ಘಟನೆ ಶನಿವಾರ ನಡೆದಿದೆ.

ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲೆ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಪೆಟ್ರೋಲ್ ರಸ್ತೆಯ ಮೇಲೆ ಹರಿದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಬಿಸಿಲಿನ ತೀವ್ರತೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸೋರಿಕೆಯಾದ ಇಂಧನಕ್ಕೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇದ್ದುದರಿಂದ ಯಾವುದೇ ಅನಾಹುತ ಸಂಭವಿಸದಂತೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದರು.

ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲಿನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಳಿಸಲಾಯಿತು.

ಅಗ್ನಿಶಾಮಕ ದಳದ ಸಿಬ್ಬಂದಿ ಸೋರಿಕೆಯಾಗುತ್ತಿದ್ದ ಇಂಧನವನ್ನು ನಿಯಂತ್ರಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡರು. ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸುವಲ್ಲಿ ಯಶಸ್ವಿಯಾದರು.
ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದರು.