ಡೈಲಿವಾರ್ತೆ:17/ಸೆ./2026

ಭಟ್ಕಳ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿಗೆ ಕಲ್ಲು ತೂರಾಟ: ಭಟ್ಕಳದಲ್ಲಿ ಉದ್ವಿಗ್ನತೆ, ಬಿಗಿ ಪೊಲೀಸ್ ಬಂದೋಬಸ್ತ್ – ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಮಸೀದಿಯೊಂದರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಭಟ್ಕಳ ತಾಲೂಕಿನ ಗುಳ್ಮಿ ಪ್ರದೇಶದಲ್ಲಿ ಬುಧವಾರ ರಾತ್ರಿ ನಡೆದಿದೆ. ಗುಳ್ಮಿ ರೈಲ್ವೆ ನಿಲ್ದಾಣಕ್ಕೆ ತೆರಳುವ ರಸ್ತೆಯಲ್ಲಿರುವ ಇಸ್ಮಾಯಿಲ್ ಮಸೀದಿಗೆ ಕಲ್ಲು ತೂರಾಟ ನಡೆದಿದ್ದು, ಘಟನೆಯಿಂದ ಮಸೀದಿಯ ಹಲವು ಕಿಟಕಿ ಗಾಜುಗಳು ಒಡೆದಿವೆ. ಘಟನೆ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಬುಧವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ತಲಾಂದ್ ಪ್ರದೇಶದಿಂದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಆರಂಭಗೊಂಡಿತ್ತು. ಮೆರವಣಿಗೆ ಗುಳ್ಮಿ ರೈಲ್ವೆ ನಿಲ್ದಾಣದತ್ತ ತೆರಳುವ ರಸ್ತೆಯ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ಇಸ್ಮಾಯಿಲ್ ಮಸೀದಿ ಬಳಿ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಕಲ್ಲುಗಳು ಮಸೀದಿಯ ಕಿಟಕಿಗಳಿಗೆ ಬಿದ್ದ ಪರಿಣಾಮ ಗಾಜುಗಳು ಒಡೆದು ಹಾನಿಯಾಗಿದೆ ಎಂದು ಮಸೀದಿ ಆಡಳಿತದವರು ತಿಳಿಸಿದ್ದಾರೆ.

ಘಟನೆ ಮಾಹಿತಿ ಪೊಲೀಸರಿಗೆ ಲಭ್ಯವಾಗುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಲಾಯಿತು. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸದಂತೆ ಪೊಲೀಸರು ತಕ್ಷಣ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸ್ಥಳದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲ್ಲು ತೂರಾಟದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಕೆಲವರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆಗೆ ಸಂಬಂಧಿಸಿದ ವೀಡಿಯೊ ದೃಶ್ಯಗಳು ಪೊಲೀಸರ ಬಳಿ ಇದ್ದು, ಅವುಗಳ ಆಧಾರದಲ್ಲಿ ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಮಸೀದಿಯ ಮೇಲೆ ಕಲ್ಲು ತೂರಾಟ ನಡೆದ ಸುದ್ದಿ ಹರಡುತ್ತಿದ್ದಂತೆ ಭಟ್ಕಳ ಪಟ್ಟಣ ಪೊಲೀಸ್ ಠಾಣೆ ಮುಂಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದರು. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ಪೊಲೀಸರು ಜನರನ್ನು ಸಮಾಧಾನಪಡಿಸಿ, ಯಾವುದೇ ರೀತಿಯ ವದಂತಿ ಅಥವಾ ಪ್ರಚೋದನೆಗೆ ಒಳಗಾಗದಂತೆ ಮನವಿ ಮಾಡಿದರು.
ಘಟನೆಯ ಮಾಹಿತಿ ಪಡೆದ ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಭಟ್ಕಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಸ್ಥಳೀಯ ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡ ಅವರು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಕಾನೂನು ಉಲ್ಲಂಘಿಸಿರುವುದು ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಭಟ್ಕಳ ಎಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದರು. ಯಾವುದೇ ಅಹಿತಕರ ಘಟನೆ ಮರುಕಳಿಸದಂತೆ ಇಸ್ಮಾಯಿಲ್ ಮಸೀದಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸದ್ಯ ಭಟ್ಕಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಕಾರಿ ಸಂದೇಶ, ವೀಡಿಯೊ ಅಥವಾ ವದಂತಿಗಳನ್ನು ಹರಡದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಕಲ್ಲು ತೂರಾಟದಲ್ಲಿ ನಿಖರವಾಗಿ ಯಾರು ಭಾಗಿಯಾಗಿದ್ದರು ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.