


ಡೈಲಿವಾರ್ತೆ:17/ಸೆ./2026

ಕುಂದಾಪುರ: ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ: ಕಟ್ಟಡ ಪರವಾನಗಿ ವಿಳಂಬ, 400 ಅರ್ಜಿಗಳ ಆರೋಪದ ಬೆನ್ನಲ್ಲೇ ದಾಖಲೆಗಳ ತಪಾಸಣೆ

ಕುಂದಾಪುರ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ಪಂಚಾಯಿತಿ ಆಡಳಿತಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಕೇಳಿಬಂದ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.

ಲೋಕಾಯುಕ್ತ ಡಿವೈಎಸ್‌ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳು, ಅರ್ಜಿಗಳು ಮತ್ತು ವಿವಿಧ ಕಡತಗಳನ್ನು ಅಧಿಕಾರಿಗಳು ಪರಿಶೀಲಿಸಿ ಮಾಹಿತಿ ಕಲೆಹಾಕಿದರು.

ಸರ್ಕಾರಿ ಸೌಲಭ್ಯಗಳನ್ನು ಒದಗಿಸುವುದಾಗಿ ಹೇಳಿ ಪಿಡಿಒ ಅವರು ಸುಮಾರು 400 ಅರ್ಜಿಗಳನ್ನು ಸ್ವೀಕರಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತ ದಾಖಲೆಗಳು ಹಾಗೂ ಅರ್ಜಿಗಳ ಸ್ಥಿತಿಗತಿಗಳ ಬಗ್ಗೆಯೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಇದರೊಂದಿಗೆ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲುಕೋರೆಗಳಿಗೂ ಲೋಕಾಯುಕ್ತ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನೂ ಅಧಿಕಾರಿಗಳು ಪರಿಶೀಲಿಸಿದರು.

ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ದೂರುಗಳ ಹಿನ್ನೆಲೆಯಲ್ಲಿ ನಡೆದಿರುವ ಈ ಪರಿಶೀಲನಾ ಕಾರ್ಯಾಚರಣೆಯಲ್ಲಿ ಪಂಚಾಯಿತಿಯ ವಿವಿಧ ದಾಖಲೆಗಳು ಹಾಗೂ ಆಡಳಿತಾತ್ಮಕ ವಿಚಾರಗಳ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪರಿಶೀಲನೆ ಪೂರ್ಣಗೊಂಡ ಬಳಿಕ ಅಧಿಕಾರಿಗಳ ವರದಿ ಹಾಗೂ ಮುಂದಿನ ಕ್ರಮದ ಬಗ್ಗೆ ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ.