


ಡೈಲಿವಾರ್ತೆ:18/ಸೆ./2026

ಭಟ್ಕಳ: ಮಸೀದಿ-ಮದರಸಾ ಮೇಲೆ ಕಲ್ಲು ತೂರಾಟ ಕಿಡಿ: ದೂರು-ಪ್ರತಿದೂರಿನಿಂದ ಉದ್ವಿಗ್ನತೆ, ಇಬ್ಬರು ಬಂಧನ! ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಭಟ್ಕಳ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಗುಳ್ಮಿ ಪ್ರದೇಶದಲ್ಲಿರುವ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಘಟನೆಗೆ ಸಂಬಂಧಿಸಿದಂತೆ ಭಟ್ಕಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮತ್ತೊಂದೆಡೆ, ಗಣೇಶ ಮೆರವಣಿಗೆ ಮೇಲೂ ಕಲ್ಲು ತೂರಾಟ ನಡೆದಿದೆ ಎಂಬ ಆರೋಪದ ಆಧಾರದ ಮೇಲೆ ಪ್ರತಿದೂರು ದಾಖಲಾಗಿರುವುದರಿಂದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಎರಡೂ ದೂರುಗಳ ಆಧಾರದ ಮೇಲೆ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಬುಧವಾರ ರಾತ್ರಿ ತಲಾಂದದಿಂದ ಗಣೇಶ ಮೂರ್ತಿ ವಿಸರ್ಜನೆಗಾಗಿ ಹೊರಟಿದ್ದ ಮೆರವಣಿಗೆ ಗುಳ್ಮಿ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ನಿಲ್ದಾಣ ರಸ್ತೆಯ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿರುವ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾ ಕಟ್ಟಡದತ್ತ ಕಲ್ಲು ತೂರಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಮಸೀದಿ ಪರವಾಗಿ ದೂರು ನೀಡಲಾಗಿದೆ.
ಘಟನೆ ನಡೆದ ಸುದ್ದಿ ಹರಡುತ್ತಿದ್ದಂತೆ ಮುಸ್ಲಿಂ ಸಮುದಾಯದ ಹಲವರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ, ಕಲ್ಲು ತೂರಾಟ ನಡೆಸಿದವರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಬಂದೋಬಸ್ತ್ ಕೈಗೊಂಡರು.
ಘಟನೆಯ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಟ್ಕಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಬಳಿಕ ವಿವಿಧ ಸಮುದಾಯಗಳ ಮುಖಂಡರು ಹಾಗೂ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವಂತೆ ಮನವಿ ಮಾಡಿದರು.
ದೂರು–ಪ್ರತಿದೂರುದಿಂದ ಪ್ರಕರಣಕ್ಕೆ ತಿರುವು:
ಈ ಮಧ್ಯೆ, ಗಣೇಶ ವಿಸರ್ಜನಾ ಮೆರವಣಿಗೆ ಮೇಲೂ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರು ಮತ್ತು ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಮೆರವಣಿಗೆ ಮೇಲೆ ಕಲ್ಲು ತೂರಿದವರ ವಿರುದ್ಧವೂ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಸಂಬಂಧ ಪ್ರತಿದೂರು ದಾಖಲಾಗಿದ್ದು, ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.
ಆದರೆ ಮೆರವಣಿಗೆ ಮೇಲಿನ ಕಲ್ಲು ತೂರಾಟದ ಆರೋಪವನ್ನು ಮುಸ್ಲಿಂ ಸಮುದಾಯದ ಪ್ರತಿನಿಧಿಗಳು ನಿರಾಕರಿಸಿದ್ದು, ಮಸೀದಿ ಹಾಗೂ ಮದರಸಾ ಮೇಲಿನ ದಾಳಿಯನ್ನು ಸಮರ್ಥಿಸಲು ಈ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಮತ್ತೊಂದೆಡೆ, ಬಿಜೆಪಿ ಮುಖಂಡರು ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿರುವುದಾಗಿ ಆರೋಪಿಸಿದ್ದಾರೆ. ಹೀಗಾಗಿ ಎರಡೂ ಕಡೆಯ ಆರೋಪಗಳ ಸತ್ಯಾಸತ್ಯತೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರ ತನಿಖೆ; ಸಾಕ್ಷ್ಯಾಧಾರ ಆಧಾರದಲ್ಲಿ ಕ್ರಮ

ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವನ್ ನಾಯಕ್ (22) ಹಾಗೂ ದೇವರಾಜ್ ಪೂಜಾರಿ (24) ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯಲ್ಲಿ ದೊರೆಯುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಪ್ರತಿಭಟನಾಕಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ, ಪೊಲೀಸ್ ಮೂಲಗಳ ಪ್ರಕಾರ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ತನಿಖೆ ಮುಂದುವರಿದಿದ್ದು, ಮೆರವಣಿಗೆಯತ್ತ ರಸ್ತೆ ಬದಿಯಿಂದ ಕೆಲವರು ತೆಂಗಿನಕಾಯಿ ಎಸೆದಿರುವುದು ಕಂಡುಬಂದಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೊನೆಯ ದಿನದ ವಿಸರ್ಜನೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ!

ಶುಕ್ರವಾರ ಗಣೇಶ ವಿಸರ್ಜನೆಯ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಪೊಲೀಸ್ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕ್ಷಿಪ್ರ ಕಾರ್ಯಪಡೆ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ.
ಮೆರವಣಿಗೆ ಸಾಗುವ ಮಾರ್ಗಗಳಲ್ಲಿರುವ ಮಸೀದಿಗಳ ಸುತ್ತಲೂ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸುವುದಾಗಿ ಹಿರಿಯ ಅಧಿಕಾರಿಗಳು ಮುಸ್ಲಿಂ ಮುಖಂಡರಿಗೆ ಭರವಸೆ ನೀಡಿದ್ದಾರೆ. ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ವಿಧಿಸಿರುವ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮುಸ್ಲಿಂ ಮುಖಂಡರು ಪೊಲೀಸರನ್ನು ಮನವಿ ಮಾಡಿದ್ದಾರೆ.
ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾವುದೇ ವದಂತಿ ಅಥವಾ ಪ್ರಚೋದನೆಗೆ ಕಿವಿಗೊಡದೆ, ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಮನವಿ ಮಾಡಿದ್ದಾರೆ.