


ಡೈಲಿವಾರ್ತೆ:23/ಸೆ./2026

ಕೋಟೇಶ್ವರ: ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಬೆಳಗ್ಗೆ ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ!

ಕುಂದಾಪುರ: ಕೋಟೇಶ್ವರದ ಪ್ರಸಿದ್ಧ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಮೃತ ಯುವಕ.
ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪದ್ಮನಾಭ ಅವರು ಕಳೆದ ನಾಲ್ಕು ತಿಂಗಳಿನಿಂದ ಕೆಲಸಕ್ಕೆ ತೆರಳುತ್ತಿರಲಿಲ್ಲ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ ಅವರು ರಾತ್ರಿ ಕಳೆದರೂ ಮನೆಗೆ ವಾಪಸಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದರು. ಇದೇ ವೇಳೆ ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು.
ಕೋಟಿತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲಿನ ಮೇಲೆ ಪದ್ಮನಾಭ ಅವರ ಚಪ್ಪಲಿ ಹಾಗೂ ಟೋಪಿ ಪತ್ತೆಯಾಗಿದ್ದು, ಅವರು ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಬಳಿಕ ಬುಧವಾರ ಬೆಳಗ್ಗೆಯಿಂದ ಪುಷ್ಕರಣಿಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಲಾಯಿತು.
ನಿತ್ಯ ಕೋಟಿತೀರ್ಥದಲ್ಲಿ ಈಜಲು ಬರುವ ಮಾರ್ಕೋಡು ಸುಧೀರ್ ಕುಮಾರ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಸತ್ಯನಾರಾಯಣ ಮಂಜ ಸೇರಿದಂತೆ ಸ್ಥಳೀಯ ಈಜುಗಾರರು ಬೋಟ್ ಸಹಾಯದಿಂದ ನೀರಿನಲ್ಲಿ ಶೋಧ ನಡೆಸಿದರು. ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ನೀರಿನಲ್ಲಿ ಮೃತದೇಹ ಇರುವುದು ಪತ್ತೆಯಾಯಿತು.
ತಕ್ಷಣ ಸ್ಥಳಕ್ಕೆ ಆಗಮಿಸಿದ ಮುಳುಗುತಜ್ಞ ಈಶ್ವರ ಮಲ್ಪೆ ಹಾಗೂ ತಂಡ ಸ್ಥಳೀಯ ಈಜುಗಾರರ ನೆರವಿನೊಂದಿಗೆ ನೀರಿಗಿಳಿದು ಮೃತದೇಹವನ್ನು ಮೇಲಕ್ಕೆತ್ತಿದರು. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.