ಡೈಲಿವಾರ್ತೆ:26/ಸೆ./2026

ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ವಿಜಯನಗರ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಅಮಲಾಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಅಮಲಾಪುರ ಗ್ರಾಮದ 40 ವರ್ಷದ ಬಸುರಾಜ್ ಗಾಯಗೊಂಡ ರೈತ. ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರಡಿ ದಾಳಿ ನಡೆಸಿದೆ ಎನ್ನಲಾಗಿದೆ. ಕರಡಿ ಉಗುರುಗಳಿಂದ ತಲೆ ಹಾಗೂ ದೇಹದ ವಿವಿಧ ಭಾಗಗಳಿಗೆ ಗೀರಿ ಗಾಯಗೊಳಿಸಿದ್ದು, ಬಸುರಾಜ್ ಅವರ ತಲೆ ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಆಳವಾದ ಗಾಯಗಳಾಗಿವೆ.

ಕರಡಿ ದಾಳಿಯಿಂದ ಗಾಯಗೊಂಡ ಬಸುರಾಜ್ ಅವರನ್ನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಸುದ್ದಿ ಹರಡುತ್ತಿದ್ದಂತೆ ಅಮಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭಾಗದಲ್ಲಿ ಕರಡಿಗಳ ಸಂಚಾರ ಹೆಚ್ಚಾಗಿದ್ದು, ರೈತರು ಹೊಲಗಳಲ್ಲಿ ಕೆಲಸ ಮಾಡಲು ಭಯಪಡುವಂತಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕರಡಿಗಳ ಚಲನವಲನದ ಮೇಲೆ ನಿಗಾ ವಹಿಸಿ, ರೈತರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೆ, ಕರಡಿ ದಾಳಿ ಮರುಕಳಿಸದಂತೆ ಅರಣ್ಯ ಇಲಾಖೆ ತಕ್ಷಣ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.