


ಡೈಲಿವಾರ್ತೆ:27/ಸೆ./2026

ಎಮ್ಮೆಕೆರೆಯಲ್ಲಿ ಬಾಲ್ಕನಿ ತಡೆಗೋಡೆ ಕುಸಿತ: ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆ ಫಲಿಸದೆ ಸಾವು, ಕಾರ್ಯಕ್ರಮ ಆಯೋಜಕ, ಕಟ್ಟಡ ಮಾಲೀಕನವಿರುದ್ಧ ಪ್ರಕರಣ ದಾಖಲು

ಮಂಗಳೂರು: ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ (16) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಹಳೆಯಂಗಡಿ ನಿವಾಸಿ ಮಹಮ್ಮದ್ ಇಲಿಯಾಸ್ ಮೊಯಿದಿನಬ್ಬ ಅವರ ಪುತ್ರ ಶಮ್ಮಾಝ್, ಬಾಲ್ಕನಿಯ ತಡೆಗೋಡೆ ಕುಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿ ಮೃತ ವಿದ್ಯಾರ್ಥಿಯ ತಂದೆ ನೀಡಿದ ದೂರಿನ ಆಧಾರದಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಟ್ಟಡದ ಮಾಲೀಕ ಪರಿಕ್ಷಿತ್ ರೈ ಹಾಗೂ ಕಾರ್ಯಕ್ರಮದ ಸಂಘಟಕ ದಿನಕರ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಟ್ಟಡದ ಸುರಕ್ಷತೆ ಹಾಗೂ ಕಾರ್ಯಕ್ರಮದ ವ್ಯವಸ್ಥೆಯಲ್ಲಿ ನಿರ್ಲಕ್ಷ್ಯ ವಹಿಸಿದ ಪರಿಣಾಮ ವಿದ್ಯಾರ್ಥಿಯ ಸಾವಿಗೆ ಕಾರಣವಾಗಿದೆ ಎಂಬ ಆರೋಪದಡಿ BNSನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.