


ಡೈಲಿವಾರ್ತೆ:30/ಸೆ./2026

ಮಣಿಪಾಲ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಗೆ ಗಂಭೀರ ಗಾಯ! ವಿಡಿಯೋ ವೈರಲ್

ಮಣಿಪಾಲ: ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಗಾಯಗೊಂಡವರನ್ನು ತೀರ್ಥಹಳ್ಳಿ ನಿವಾಸಿ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಆಸ್ಪತ್ರೆಯ ನಾಲ್ಕನೇ ಮಹಡಿಯ ಕಿಟಕಿಯ ಮೂಲಕ ಹೊರಬರಲು ಯತ್ನಿಸಿದ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದ ಪರಿಣಾಮ ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.