



ಡೈಲಿವಾರ್ತೆ:05/ಅ./2026

ಉಡುಪಿ: ಇಂದ್ರಾಳಿ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪ್ರಯಾಣಿಕ ಸಾವು

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದ ಬಳಿ ನಡೆದಿದೆ.
ದೆಹಲಿ–ಎರ್ನಾಕುಳಂ ಮಾರ್ಗದಲ್ಲಿ ಸಂಚರಿಸುವ 12284ನೇ ಸಂಖ್ಯೆಯ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲು ಇಂದ್ರಾಳಿ ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಾಗುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಕೆಳಗೆ ಬಿದ್ದಿರುವುದು ಘಟನೆಗೆ ಕಾರಣವಾಗಿದೆ ಎನ್ನಲಾಗಿದೆ.
ಇಂದ್ರಾಳಿ ನಿಲ್ದಾಣದಲ್ಲಿ ಈ ರೈಲಿಗೆ ನಿಲುಗಡೆ ವ್ಯವಸ್ಥೆ ಇರಲಿಲ್ಲ.
ಪ್ರಯಾಣಿಕರು ರೈಲಿನಿಂದ ಬಿದ್ದಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ರೈಲ್ವೆ ಆರ್‌ಪಿಎಫ್ ಸಿಬ್ಬಂದಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಅವರು, ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಂಡರು.
ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲನೆ ನಡೆಸಿದ ಬಳಿಕ ವ್ಯಕ್ತಿ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮೃತರ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.