ಡೈಲಿವಾರ್ತೆ:05/ಅ./2026

ಪಣಂಬೂರು: ಸಮುದ್ರದಲ್ಲಿ
ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿ ನೀರುಪಾಲು

ಮಂಗಳೂರು: ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿ ಮೃತಪಟ್ಟಿರುವ ದಾರುಣ ಘಟನೆ ಮಂಗಳೂರಿನ ಪಣಂಬೂರು ಕಡಲತೀರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ರೆಂಕೆದಗುತ್ತು ನಿವಾಸಿ ಶೇಖರ್ ಕೆಂಬರ್ಜೆ ಅವರ ಪುತ್ರ ಶ್ರೇಯಸ್ (15) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿಯ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಶ್ರೇಯಸ್ ತನ್ನ ಸ್ನೇಹಿತರೊಂದಿಗೆ ಪಣಂಬೂರು ಸಮುದ್ರಕ್ಕೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈಜುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು, ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.