ಡೈಲಿವಾರ್ತೆ:08/ಅ./2026

ಶಿವಮೊಗ್ಗ: ಖಾಸಗಿ ಸ್ಲೀಪರ್ ಬಸ್‌ಗೆ ಬೆಂಕಿ – ಪ್ರಯಾಣಿಕರು ಪಾರು!

ಶಿವಮೊಗ್ಗ: ಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಬಸ್‌ ಸುಟ್ಟು ಕರಕಲಾದ ಘಟನೆ ಆನಂದಪುರ ಸಮೀಪದ ಮುಂಬಾಳು ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ-206ರಲ್ಲಿ ಬಸ್‌ ಸಂಚರಿಸುತ್ತಿದ್ದ ವೇಳೆ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಬಸ್‌ನಾದ್ಯಂತ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆ ಬಸ್‌ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಹಾಗೂ ಕ್ಲೀನರ್‌ ಎಚ್ಚೆತ್ತುಕೊಂಡು ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೂಡಲೇ ಕೆಳಗಿಳಿಸಿದ್ದಾರೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯ ವೇಳೆ ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರು. ಸಾಗರದತ್ತ ಮುಂದುವರಿಯುತ್ತಿದ್ದ ಬಸ್‌ನಲ್ಲಿ ಕೇವಲ ಇಬ್ಬರು ಪ್ರಯಾಣಿಕರು ಮಾತ್ರ ಇದ್ದರು.
ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲಿ ಬೆಂಕಿ ಅವಘಡ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇತ್ತು ಎನ್ನಲಾಗಿದೆ. ಚಾಲಕ ಮತ್ತು ಕ್ಲೀನರ್‌ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಸ್‌ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಿದರು. ಘಟನೆಯ ಕುರಿತು ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.