ಡೈಲಿವಾರ್ತೆ:11/ಅ./2026

ಸಿಇಸಿ ರಾಜೀನಾಮೆಗೆ ಪಟ್ಟು: ದೆಹಲಿಯಲ್ಲಿ ಮತ್ತೆ ಸಿಜೆಪಿ ಪ್ರತಿಭಟನೆ – ಮೋದಿ, ಶಾ ವಿರುದ್ಧ ಶಿಂಧೆ ವಾಗ್ದಾಳಿ!

ನವದೆಹಲಿ: ಮತದಾರರ ಪಟ್ಟಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಭಾನುವಾರ ಮತ್ತೆ ಪ್ರತಿಭಟನೆಗೆ ಕರೆ ನೀಡಿದೆ.

ಶನಿವಾರ ದೆಹಲಿಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದ್ದು, ಬೆಳಗ್ಗೆ 10 ಗಂಟೆಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಜೆಪಿಯ ರಾಷ್ಟ್ರೀಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ, ಮೋದಿ ಮತ್ತು ಅಮಿತ್ ಶಾ ಭಯಗೊಂಡಿದ್ದಾರೆ. ಅವರ ಭಯವೇ ನಮ್ಮ ಹೋರಾಟದ ಅರ್ಧದಷ್ಟು ಗೆಲುವನ್ನು ಸೂಚಿಸುತ್ತದೆ. ಸಿಇಸಿ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಪೊಲೀಸರು ಎಲ್ಲಿ ತಡೆದರೂ ಅಲ್ಲಿಯೇ ಪ್ರತಿಭಟನೆ ಮುಂದುವರಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಕೋಟ್ಯಂತರ ಮತಗಳನ್ನು ಅಳಿಸಿ ತಿರುಚಲಾಗಿದೆ ಎಂಬ ಆರೋಪಗಳನ್ನು ಮುಂದಿಟ್ಟುಕೊಂಡು ಸಿಜೆಪಿ ಹೋರಾಟ ನಡೆಸುತ್ತಿದೆ. ಆರೋಪಗಳಿಗೆ ಸಂಬಂಧಿಸಿದಂತೆ ಹೊಣೆಗಾರಿಕೆ ನಿಗದಿಪಡಿಸುವವರೆಗೆ ದೇಶಾದ್ಯಂತ ನಾಗರಿಕ ಅಸಹಕಾರ ಚಳವಳಿ ಮತ್ತು ಬೀದಿ ಪ್ರತಿಭಟನೆಗಳನ್ನು ಮುಂದುವರಿಸುವುದಾಗಿ ಪಕ್ಷ ತಿಳಿಸಿದೆ.

ಶನಿವಾರದ ಪ್ರತಿಭಟನೆಯ ವೇಳೆ ಪೊಲೀಸರು ವ್ಯಾಪಕ ಭದ್ರತೆ ಕೈಗೊಂಡು ಹಲವು ಪ್ರತಿಭಟನಾಕಾರರು ಹಾಗೂ ರಾಜಕೀಯ ಮುಖಂಡರನ್ನು ವಶಕ್ಕೆ ಪಡೆದಿದ್ದರು. ಪ್ರತಿಭಟನೆಗೆ ನಿರ್ಬಂಧ ವಿಧಿಸಿರುವುದು ಮತ್ತು ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸಿರುವುದನ್ನು ಸಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಖಂಡಿಸಿದ್ದು, ಶಾಂತಿಯುತವಾಗಿ ಸಭೆ ಸೇರುವ ಸಾಂವಿಧಾನಿಕ ಹಕ್ಕನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನೊಂದೆಡೆ, ಪ್ರತಿಭಟನೆಯ ಹಿನ್ನೆಲೆಯಲ್ಲಿ ಭಾನುವಾರ ನವದೆಹಲಿ ಮತ್ತು ಮಧ್ಯ ದೆಹಲಿಯ ಹಲವು ಪ್ರದೇಶಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ ಎಂದು ದೆಹಲಿ ಸಂಚಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಜಂತರ್ ಮಂತರ್, ಸಂಸದ್ ಮಾರ್ಗ್, ಕನ್ನಾಟ್ ಪ್ಲೇಸ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ ಜಾರಿಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.