ಡೈಲಿವಾರ್ತೆ:11/ಅ./2026

ಚಲಿಸುತ್ತಿದ್ದ ಕಾರಿಗೆ ಬೆಂಕಿ: ಕ್ಷಣಾರ್ಧದಲ್ಲಿ ಸುಟ್ಟು ಕರಕಲು – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ!

ಧಾರವಾಡ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಧಾರವಾಡ ಹೊರವಲಯದ ಬೈಪಾಸ್‌ ರಸ್ತೆಯ ಹಳಿಯಾಳ ಸೇತುವೆ ಬಳಿ ನಡೆದಿದೆ. ಕಾರಿನಲ್ಲಿದ್ದವರು ಸಮಯಪ್ರಜ್ಞೆಯಿಂದ ತಕ್ಷಣ ಹೊರಬಂದಿದ್ದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅವೀದ್‌ ಶೇಖ್‌ ಅವರಿಗೆ ಸೇರಿದ KA-29-ME-3528 ನೋಂದಣಿ ಸಂಖ್ಯೆಯ ರೆನಾಲ್ಟ್‌ ಡಸ್ಟರ್‌ ಕಾರು ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದತ್ತ ಪ್ರಯಾಣಿಸುತ್ತಿತ್ತು. ಧಾರವಾಡ ಬೈಪಾಸ್‌ ರಸ್ತೆಯ ಹಳಿಯಾಳ ಸೇತುವೆ ಸಮೀಪಿಸುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ಇದನ್ನು ಗಮನಿಸಿದ ಕಾರಿನಲ್ಲಿದ್ದವರು ತಕ್ಷಣ ಎಚ್ಚೆತ್ತುಕೊಂಡು ವಾಹನದಿಂದ ಕೆಳಗಿಳಿದಿದ್ದಾರೆ. ಅವರು ಕಾರಿನಿಂದ ಹೊರಬಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರವಾಗಿ ವ್ಯಾಪಿಸಿದ್ದು, ಇಡೀ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿತ್ತು.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.