



ಡೈಲಿವಾರ್ತೆ:11/ಅ./2026

ದುರ್ಗಾಮಾತೆಯ ಮೂರ್ತಿ ತರಲು ಹೊರಟಿದ್ದವರ ಮೇಲೆ ಮೃತ್ಯು ಅಟ್ಟಹಾಸ: ಲಾರಿ ಡಿಕ್ಕಿಗೆ ಮೂವರು ಯುವಕರ ಬಲಿ, ಹಲವರಿಗೆ ಗಂಭೀರ ಗಾಯ!

ಚಿಕ್ಕೋಡಿ: ನವರಾತ್ರಿ–ದಸರಾ ಉತ್ಸವದ ಸಂಭ್ರಮದಲ್ಲಿ ದುರ್ಗಾಮಾತೆಯ ಮೂರ್ತಿಯನ್ನು ಪ್ರತಿಷ್ಠಾಪಿಸಲು ಸ್ವಗ್ರಾಮಕ್ಕೆ ಮರಳುತ್ತಿದ್ದ ಯುವಕರ ತಂಡ ಭೀಕರ ರಸ್ತೆ ಅಪಘಾತಕ್ಕೆ ಸಿಲುಕಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದ ಬಳಿ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಹಂಗ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಂಗ್ಯಾನಟ್ಟಿ (ಹಂಜಾನಟ್ಟಿ) ಗ್ರಾಮದಲ್ಲಿ ದಸರಾ ಮಹೋತ್ಸವದ ಅಂಗವಾಗಿ ದುರ್ಗಾಮಾತೆಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ದುರ್ಗಾದೇವಿ ದೌಡ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ ಯುವಕರು ಬೆಳಗಾವಿ ನಗರಕ್ಕೆ ತೆರಳಿ ದುರ್ಗಾಮಾತೆಯ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಇರಿಸಿಕೊಂಡು, ದೇವಿಯ ಜಯಘೋಷಗಳೊಂದಿಗೆ ಸಂಭ್ರಮದಿಂದ ಸ್ವಗ್ರಾಮದತ್ತ ಪ್ರಯಾಣ ಬೆಳೆಸಿದ್ದರು. ಆದರೆ, ಅವರ ಸಂಭ್ರಮದ ಪ್ರಯಾಣ ಮಾರ್ಗಮಧ್ಯೆಯೇ ಭೀಕರ ದುರಂತದಲ್ಲಿ ಅಂತ್ಯಗೊಂಡಿದೆ.
ಹಿಂಬದಿಯಿಂದ ಅಪ್ಪಳಿಸಿದ ಲಾರಿ; ಮೂವರು ಬಲಿ:
ಯುವಕರು ಪ್ರಯಾಣಿಸುತ್ತಿದ್ದ ಟ್ರ್ಯಾಕ್ಟರ್ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಟ್ರ್ಯಾಕ್ಟರ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್ ಜಖಂಗೊಂಡಿದ್ದು, ಅದರಲ್ಲಿದ್ದ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅಪಘಾತದ ಪರಿಣಾಮ ತೀವ್ರ ರಕ್ತಸ್ರಾವದಿಂದ ಹಂಗ್ಯಾನಟ್ಟಿ ಗ್ರಾಮದ ಪ್ರಕಾಶ ವಾಸೇದಾರ (28), ದಾನಪ್ಪ ಜಾಗನೂರೆ (26) ಹಾಗೂ ಶಿವಪ್ಪ ಖಾನಾಪೂರೆ (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ತಕ್ಷಣವೇ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆ ಹಾಗೂ ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
20 ಮಂದಿ ಪ್ರಯಾಣ; ಗಾಯಾಳುಗಳಿಂದ ಘಟನೆಯ ವಿವರ:
ಅಪಘಾತದ ಭೀಕರತೆಯನ್ನು ಗಾಯಾಳು ಸುನೀಲ್ ಗಬ್ಬಿ ವಿವರಿಸಿದ್ದು, ಬೆಳಗಾವಿಯಿಂದ ದುರ್ಗಾಮಾತೆಯ ಮೂರ್ತಿಯನ್ನು ತೆಗೆದುಕೊಂಡು ಟ್ರ್ಯಾಕ್ಟರ್‌ನಲ್ಲಿ ಗ್ರಾಮಕ್ಕೆ ಮರಳುತ್ತಿದ್ದಾಗ ಬೆಳಗಿನ ಜಾವ ಸುಮಾರು 6 ಗಂಟೆಗೆ ಹಿಂಬದಿಯಿಂದ ಬಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ.
ಟ್ರ್ಯಾಕ್ಟರ್‌ನಲ್ಲಿ ಸುಮಾರು 20 ಮಂದಿ ಇದ್ದರು. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅವರಲ್ಲಿ ಒಬ್ಬರನ್ನು ಜಿಲ್ಲಾಸ್ಪತ್ರೆಗೆ ಹಾಗೂ ಮತ್ತೊಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಘಟನೆಯ ವಿವರ ನೀಡಿದ್ದಾರೆ.
ಹಂಗ್ಯಾನಟ್ಟಿ ಗ್ರಾಮದಲ್ಲಿ ಮಡುಗಟ್ಟಿದ ಶೋಕ:
ದಸರಾ ಹಬ್ಬದ ಹಿನ್ನೆಲೆಯಲ್ಲಿ ದುರ್ಗಾಮಾತೆಯ ಮೂರ್ತಿಯನ್ನು ಗ್ರಾಮಕ್ಕೆ ತಂದು, ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರತಿಷ್ಠಾಪಿಸಿ ಸಂಭ್ರಮದಿಂದ ಉತ್ಸವ ಆಚರಿಸುವ ಉದ್ದೇಶ ಹೊಂದಿದ್ದ ಯುವಕರ ಪೈಕಿ ಮೂವರು ದುರಂತ ಸಾವಿಗೀಡಾಗಿರುವುದು ಗ್ರಾಮಸ್ಥರನ್ನು ಆಘಾತಕ್ಕೀಡು ಮಾಡಿದೆ. ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದ ಗ್ರಾಮದಲ್ಲಿ ಸಾವಿನ ಸುದ್ದಿ ಹರಡುತ್ತಿದ್ದಂತೆ ಶೋಕದ ವಾತಾವರಣ ಆವರಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ದುಃಖ ಮಡುಗಟ್ಟಿದೆ.
ಸ್ಥಳಕ್ಕೆ ಪೊಲೀಸರ ಭೇಟಿ; ಪ್ರಕರಣ ದಾಖಲು
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಯಮಕನಮರಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಉಂಟಾಗಿದ್ದ ಸಂಚಾರ ಅಡಚಣೆಯನ್ನು ನಿವಾರಿಸಲು ಜಖಂಗೊಂಡ ವಾಹನಗಳನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.