




ಡೈಲಿವಾರ್ತೆ:14/ಅ./2026

ಮಮತಾ ಬ್ಯಾನರ್ಜಿ ಮೇಲೆ ಚಾಕು ಹಿಡಿದು ದಾಳಿಗೆ ಯತ್ನ: ಪೊಲೀಸರಿಗೆ ದೂರು, ಆರೋಪಿ ಮಹಿಳೆ ವಶಕ್ಕೆ

ಕೋಲ್ಕತ್ತ/ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಚಾಕು ಹಿಡಿದುಕೊಂಡು ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿರುವ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಕೋಲ್ಕತ್ತದ ಕಾಳಿಘಾಟ್ ಪ್ರದೇಶದಲ್ಲಿರುವ ತಮ್ಮ ನಿವಾಸದ ಸಮೀಪ ಆಯೋಜಿಸಲಾಗಿದ್ದ ದುರ್ಗಾಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಲು ಮಮತಾ ಬ್ಯಾನರ್ಜಿ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಂಜೆ ಸುಮಾರು 6 ಗಂಟೆಗೆ ತಮ್ಮ ನಿವಾಸದ ಸಮೀಪದ ‘ಮಿಲನ್ ಸಂಘ ಪೂಜಾ ಪೆಂಡಾಲ್’ಗೆ ಭೇಟಿ ನೀಡಿದ ವೇಳೆ ಮಹಿಳೆಯೊಬ್ಬರು ಚಾಕು ಹಿಡಿದುಕೊಂಡು ಅವರತ್ತ ಆಕ್ರಮಣಕಾರಿಯಾಗಿ ಮುನ್ನುಗ್ಗಲು ಯತ್ನಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿ ಡೋಲಾ ಸೇನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.
ದೂರಿನ ಪ್ರಕಾರ, ಸ್ಥಳೀಯವಾಗಿ ಸ್ವಯಂಸೇವಕಿಯಾಗಿ ಗುರುತಿಸಿಕೊಂಡಿರುವ ಮಹಿಳೆಯು ಅಮಲಿನಲ್ಲಿದ್ದಂತೆ ವರ್ತಿಸುತ್ತಾ ಮಮತಾ ಬ್ಯಾನರ್ಜಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಲ್ಲದೆ, ಕೈಯಲ್ಲಿ ಚಾಕು ಹಿಡಿದು ಬೆದರಿಕೆಯೊಡ್ಡುವ ರೀತಿಯಲ್ಲಿ ವರ್ತಿಸಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ಸಲ್ಲಿಸಲಾಗಿದ್ದು, ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಝಡ್ ಪ್ಲಸ್ ಶ್ರೇಣಿಯ ಭದ್ರತೆ ಹೊಂದಿರುವ ಮಮತಾ ಬ್ಯಾನರ್ಜಿ ಅವರ ನಿವಾಸದ ಸಮೀಪವೇ ಚಾಕು ಹಿಡಿದ ಮಹಿಳೆಯೊಬ್ಬರು ತಲುಪಿರುವುದು ಭದ್ರತಾ ವ್ಯವಸ್ಥೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಅಡಿಯಲ್ಲಿ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು. ಘಟನೆಯ ಹಿಂದೆ ಯಾವುದೇ ಪೂರ್ವಯೋಜಿತ ಸಂಚು ಇದೆಯೇ ಎಂಬುದನ್ನೂ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.