ಡೈಲಿವಾರ್ತೆ:15/ಅ./2026

ನಾವೂರಿನ ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಓರ್ವನ ಬಂಧನ, ಇಬ್ಬರ ವಿಚಾರಣೆ

ಬೆಳ್ತಂಗಡಿ: ತಾಲೂಕಿನ ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನಾವೂರು ನಿವಾಸಿ ರವಿ ಪೂಜಾರಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವೂರು ನಿವಾಸಿ ಸುರೇಶ್ ಇಂಚರ ಅವರನ್ನು ಅಕ್ಟೋಬರ್ 14ರ ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ, ಪುತ್ತೂರಿನ ಕೌಡಿಚಾರು ಪ್ರದೇಶದಲ್ಲಿದ್ದ ದಿನೇಶ್ ಪ್ರಭು ನಾವೂರು ಎಂಬವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎಂದು ವರದಿಯಾಗಿದೆ.

ತಡರಾತ್ರಿ ಕ್ಲಿನಿಕ್‌ಗೆ ಬೆಂಕಿ:

ಅಕ್ಟೋಬರ್ 7ರಂದು ತಡರಾತ್ರಿ ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ದುಷ್ಕರ್ಮಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರು. ಈ ಘಟನೆಯಿಂದ ಕ್ಲಿನಿಕ್‌ನಲ್ಲಿದ್ದ ಔಷಧಗಳು ಹಾಗೂ ವೈದ್ಯಕೀಯ ಉಪಕರಣಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸುಮಾರು 2ರಿಂದ 3 ಲಕ್ಷ ರೂ. ನಷ್ಟ ಸಂಭವಿಸಿತ್ತು. ಘಟನೆಯು ಬೆಳ್ತಂಗಡಿ ತಾಲೂಕಿನಲ್ಲಿ ತೀವ್ರ ಆತಂಕ ಮೂಡಿಸಿತ್ತು.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಕಲಂ 326 ಮತ್ತು 324ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿ, ಘಟನೆಯ ಹಿಂದೆ ಇರುವವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.

ಆರೋಪಿಗಳ ಬಂಧನಕ್ಕೆ ವ್ಯಾಪಕ ಒತ್ತಾಯ:

ವೈದ್ಯರ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಘಟನೆಯನ್ನು ತಾಲೂಕಿನಾದ್ಯಂತ ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದರು. ಶಾಸಕ ಹರೀಶ್ ಪೂಂಜ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಸಮಾಜದ ಮುಖಂಡರು, ಉದ್ಯಮಿಗಳು, ವೈದ್ಯರು ಹಾಗೂ ಸಾರ್ವಜನಿಕರು ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ನಾವೂರು ಗ್ರಾಮಸ್ಥರು ಘಟನೆಯನ್ನು ಖಂಡಿಸಿ ಸಭೆ ನಡೆಸಿ, ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ವಿವಿಧ ಸಂಘಟನೆಗಳೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿದ್ದವು.

ಈ ಹಿನ್ನೆಲೆಯಲ್ಲಿ ತನಿಖೆಯನ್ನು ತೀವ್ರಗೊಳಿಸಿದ ಬೆಳ್ತಂಗಡಿ ಪೊಲೀಸರು, ಘಟನೆ ನಡೆದ ಒಂದು ವಾರದೊಳಗೆ ಆರೋಪಿಯನ್ನು ಬಂಧಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಶಂಕಿತರನ್ನೂ ವಿಚಾರಣೆಗೊಳಪಡಿಸಿದ್ದಾರೆ.
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ
ಘಟನೆ ನಡೆದ ಬಳಿಕ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಬೂಮರೆಡ್ಡಿ, ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಹಾಗೂ ಪೊಲೀಸ್ ಮತ್ತು ಸೋಕೋ ತಂಡದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಡಿವೈಎಸ್‌ಪಿ ರೋಹಿಣಿ ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಆನಂದ್ ಮತ್ತು ಸಿಖಂದರ್ ಪಾಷಾ ಸೇರಿದಂತೆ ಪೊಲೀಸ್ ತಂಡವು ತನಿಖೆ ಹಾಗೂ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.
ವೈದ್ಯಕೀಯ ಸೇವೆ ನೀಡುವ ಕ್ಲಿನಿಕ್‌ನ್ನೇ ಗುರಿಯಾಗಿಸಿಕೊಂಡು ನಡೆದಿದ್ದ ಈ ಕೃತ್ಯ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಓರ್ವನ ಬಂಧನ ಹಾಗೂ ಇತರ ಶಂಕಿತರ ವಿಚಾರಣೆಯಿಂದ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದೆ.